HomeGadag Newsಅಮೃತ್ 2.0 ಅನುದಾನದಿಂದ ಗದಗದ ನೀರಿನ ಕನಸು ನನಸು: ಅನಿಲ್ ಮೆಣಸಿನಕಾಯಿ

ಅಮೃತ್ 2.0 ಅನುದಾನದಿಂದ ಗದಗದ ನೀರಿನ ಕನಸು ನನಸು: ಅನಿಲ್ ಮೆಣಸಿನಕಾಯಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದ ಬಹುದಿನಗಳ ಕನಸಾಗಿದ್ದ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಹಾಗೂ ರೈತರ ಬದುಕಿಗೆ ಹೊಸ ಆಶಾಕಿರಣ ಮೂಡಿಸುವ ನೀರಾವರಿ ಯೋಜನೆಗಳಿಗೆ ಬೃಹತ್ ಅನುದಾನ ದೊರೆತು ಕಾಮಗಾರಿಗಳಿಗೆ ಚಾಲನೆ ಸಿಕ್ಕಿರುವುದು ಸಂತಸ ತಂದಿದೆ ಎಂದು ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೇಂದ್ರ ಸರ್ಕಾರದ ‘ಅಮೃತ್ 2.0’ ಯೋಜನೆಯಡಿ ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ₹42 ಕೋಟಿ ಅನುದಾನ ಬಿಡುಗಡೆಯಾಗಿರುವುದನ್ನು ಸ್ವಾಗತಿಸಿದ್ದಾರೆ. ಡಂಬಳದಿಂದ ಗದಗ ‘ಎ’ ಪಾಯಿಂಟ್‌ವರೆಗೆ ಹೊಸ ಪೈಪ್‌ಲೈನ್ ಸಂಪರ್ಕ ಕಲ್ಪಿಸುವುದು ಹಾಗೂ ನಗರದ ವಿವಿಧ ಭಾಗಗಳಲ್ಲಿ ಐದು ಬೃಹತ್ ಓವರ್‌ಹೆಡ್ ಟ್ಯಾಂಕ್‌ಗಳ ನಿರ್ಮಾಣಕ್ಕಾಗಿ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವುದು ಅಭಿವೃದ್ಧಿಗೆ ಹೊಸ ವೇಗ ನೀಡಲಿದೆ ಎಂದು ಹೇಳಿದ್ದಾರೆ.

ಈ ಮಹತ್ವಾಕಾಂಕ್ಷಿ ಯೋಜನೆಗೆ ಅಗತ್ಯ ಅನುದಾನ ದೊರಕಿಸುವಲ್ಲಿ ಯಶಸ್ವಿಯಾದ ಗದಗ-ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ ಅವರಿಗೆ ಗದಗ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿರುವ ಅವರು, ಹಮ್ಮಿಗಿಯಿಂದ ಡಂಬಳವರೆಗೆ ಬಾಕಿ ಉಳಿದಿರುವ ಕುಡಿಯುವ ನೀರಿನ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇದೇ ವೇಳೆ ₹187 ಕೋಟಿ ವೆಚ್ಚದ ಜಾಲವಾಡಗಿ ಏತ ನೀರಾವರಿ ಯೋಜನೆ ಈ ಭಾಗದ ರೈತರಿಗೆ ವರದಾನವಾಗಲಿದ್ದು, ಯೋಜನೆ ಅನುಷ್ಠಾನಕ್ಕೆ ಅಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವರಾಗಿದ್ದ ಸಿ.ಸಿ. ಪಾಟೀಲ್, ಶಾಸಕರಾಗಿದ್ದ ಕಳಕಪ್ಪ ಬಂಡಿ ಹಾಗೂ ಮಾಜಿ ಸಂಸದ ಶಿವಕುಮಾರ ಉದಾಸಿ ಅವರು ಸಾಕಷ್ಟು ಶ್ರಮಿಸಿದ್ದರು ಎಂದು ಸ್ಮರಿಸಿದ್ದಾರೆ. ಯೋಜನೆಗೆ ಅನುದಾನ ಬಿಡುಗಡೆಯಾಗಿದ್ದರೂ ಕಾಮಗಾರಿಗೆ ಚಾಲನೆ ದೊರೆತಿರಲಿಲ್ಲ. ಇದೀಗ ಕಾಮಗಾರಿ ಆರಂಭವಾಗಿರುವುದು ರೈತಾಪಿ ವಲಯದಲ್ಲಿ ಹೊಸ ಆಶಾಭಾವನೆ ಮೂಡಿಸಿದೆ ಎಂದು ತಿಳಿಸಿದ್ದಾರೆ.

ಜಾಲವಾಡಗಿ ಏತ ನೀರಾವರಿ ಯೋಜನೆಯಡಿ ಗದಗ ವಿಧಾನಸಭಾ ಕ್ಷೇತ್ರದ 17 ಪ್ರಮುಖ ಕೆರೆಗಳ ಜೊತೆಗೆ ರೋಣ ಮತ್ತು ಶಿರಹಟ್ಟಿ ಕ್ಷೇತ್ರಗಳ ಕೆರೆಗಳನ್ನು ತುಂಬಿಸುವ ಯೋಜನೆ ರೂಪಿಸಲಾಗಿದ್ದು, ಇದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಿ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಗದಗ-ಬೆಟಗೇರಿ ಅವಳಿ ನಗರದ ಬಾಕಿ ಉಳಿದಿರುವ ವರ್ತುಲ ರಸ್ತೆ ನಿರ್ಮಾಣಕ್ಕೂ ತಕ್ಷಣ ಮರುಚಾಲನೆ ನೀಡುವಂತೆ ಸರ್ಕಾರವನ್ನು ಅವರು ಒತ್ತಾಯಿಸಿದ್ದಾರೆ. ಸಂಸದ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ₹473 ಕೋಟಿ ವೆಚ್ಚದ ವರ್ತುಲ ರಸ್ತೆ ಯೋಜನೆಗೆ ಸಚಿವ ಸಂಪುಟ ಹಾಗೂ ಹಣಕಾಸು ಇಲಾಖೆಯ ಅನುಮೋದನೆ ದೊರೆತಿದ್ದರೂ, ನಂತರದ ದಿನಗಳಲ್ಲಿ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದಲ್ಲದೆ, ಹಳೆ ಕೋರ್ಟ್ ಹಾಗೂ ಜೆ.ಟಿ. ಕಾಲೇಜು ಸಮೀಪದ ರೈಲ್ವೆ ಅಂಡರ್‌ಪಾಸ್‌ಗಳನ್ನು ಓವರ್‌ಬ್ರಿಡ್ಜ್‌ಗಳಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಈಗಾಗಲೇ ಆಯ್ಕೆಯಾಗಿದ್ದು, ಅಗತ್ಯ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿಗಳನ್ನು ಶೀಘ್ರ ಆರಂಭಿಸಲು ಸಂಸದ ಬಸವರಾಜ್ ಬೊಮ್ಮಾಯಿ ಮುಂದಾಗಬೇಕು ಎಂದು ಅನಿಲ ಮೆಣಸಿನಕಾಯಿ ಮನವಿ ಮಾಡಿದ್ದಾರೆ. ಈ ಕಾಮಗಾರಿಗಳು ಪೂರ್ಣಗೊಂಡರೆ ವಾಹನ ಸಂಚಾರ ದಟ್ಟಣೆ ಕಡಿಮೆಯಾಗುವುದರ ಜೊತೆಗೆ ಮಳೆಗಾಲದಲ್ಲಿ ಅಂಡರ್‌ಪಾಸ್‌ಗಳಲ್ಲಿ ನೀರು ನಿಲ್ಲುವ ಸಮಸ್ಯೆಗೂ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕುಡಿಯುವ ನೀರು, ನೀರಾವರಿ ಹಾಗೂ ರಸ್ತೆ ಅಭಿವೃದ್ಧಿ ಯೋಜನೆಗಳು ಗದಗ-ಬೆಟಗೇರಿ ಭಾಗದ ಭವಿಷ್ಯ ರೂಪಿಸಲಿವೆ. ಈಗಾಗಲೇ ಅನುಮೋದನೆಗೊಂಡಿರುವ ವರ್ತುಲ ರಸ್ತೆ ಸೇರಿದಂತೆ ಬಾಕಿ ಉಳಿದಿರುವ ಎಲ್ಲ ಕಾಮಗಾರಿಗಳಿಗೆ ಸರ್ಕಾರ ತಕ್ಷಣ ಮರುಚಾಲನೆ ನೀಡಬೇಕು”

ಅನಿಲ್ ಮೆಣಸಿನಕಾಯಿ, ಬಿಜೆಪಿ ಮುಖಂಡ


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!