ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳ ಕೈಗೆ ಕೆಲಸವಲ್ಲ, ಶಿಕ್ಷಣದ ಬೆಳಕು ತಲುಪಿಸಬೇಕೆಂಬ ಸಂದೇಶದೊಂದಿಗೆ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಗದಗ ನಗರದಲ್ಲಿ ಗುರುವಾರ ಬೃಹತ್ ಜನಜಾಗೃತಿ ಜಾಥಾ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿ (ರಿ) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಾಥಾಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶ ಸಿ.ಎಸ್. ಶಿವನಗೌಡ್ರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಿವನಗೌಡ್ರ ಅವರು, ಮಕ್ಕಳು ದೇಶದ ಭವಿಷ್ಯವಾಗಿದ್ದು, ಅವರನ್ನು ಬಾಲ ಕಾರ್ಮಿಕ ಪದ್ಧತಿಯಿಂದ ಮುಕ್ತಗೊಳಿಸಿ ಶಿಕ್ಷಣದ ಮುಖ್ಯವಾಹಿನಿಗೆ ತರುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೇಳಿದರು.
14 ವರ್ಷದೊಳಗಿನ ಮಕ್ಕಳನ್ನು ಹೋಟೆಲ್, ಗ್ಯಾರೇಜ್, ಕಟ್ಟಡ ಕಾಮಗಾರಿ ಸೇರಿದಂತೆ ಯಾವುದೇ ಉದ್ಯಮಗಳಲ್ಲಿ ಕೆಲಸಕ್ಕೆ ನೇಮಿಸುವುದು ಕಾನೂನುಬಾಹಿರವಾಗಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಸಾರ್ವಜನಿಕರು ತಮ್ಮ ಸುತ್ತಮುತ್ತ ಬಾಲ ಕಾರ್ಮಿಕ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.
ಗದಗ-ಬೆಟಗೇರಿ ನಗರಸಭೆ ಆವರಣದಿಂದ ಆರಂಭವಾದ ಜಾಥಾ ಮಹಾತ್ಮ ಗಾಂಧಿ ವೃತ್ತ, ಮಹೇಂದ್ರಕರ್ ಸರ್ಕಲ್, ಟಾಂಗಕೂಟ, ಹಳೆ ಬಸ್ ನಿಲ್ದಾಣ, ರೋಟರಿ ಸರ್ಕಲ್ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಜಾಗೃತಿ ಮೂಡಿಸಿತು.
ಜಾಥಾದಲ್ಲಿ ಭಾಗವಹಿಸಿದ್ದ ನೂರಾರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು “ಬಾಲ ಕಾರ್ಮಿಕ ಪದ್ಧತಿ ತೊಲಗಲಿ, ಮಕ್ಕಳ ಭವಿಷ್ಯ ಬೆಳಗಲಿ”, “ಮಕ್ಕಳಿಗೆ ಕೆಲಸ ಬೇಡ, ಅಕ್ಷರ ನೀಡಿ” ಎಂಬ ಘೋಷಣೆಗಳನ್ನು ಕೂಗಿ ಜನರಲ್ಲಿ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜಯದೇವಿ ಕವಲೂರು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಹಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಆರ್., ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
“ಶಾಲೆಗೆ ಹೋಗಬೇಕಾದ ವಯಸ್ಸಿನಲ್ಲಿ ಮಕ್ಕಳನ್ನು ದುಡಿಮೆಗೆ ತಳ್ಳುವುದು ಅಪರಾಧ. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬ ನಾಗರಿಕರೂ ಕೈಜೋಡಿಸಬೇಕು.”
ಶಿವನಗೌಡ್ರ, ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ



