ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಕೆರೆ, ಜಲಾಶಯ ಹಾಗೂ ಡ್ಯಾಮ್‌ಗಳಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯುವ ನೀರು ಹಾಗೂ ಜನಜೀವನಕ್ಕೆ ಅಗತ್ಯವಾದ ಬಳಕೆಗೆ ಮಾತ್ರ ಮೀಸಲಿಡಬೇಕು ಎಂದು ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬೆಂಗಳೂರುದಿಂದ ವಿಡಿಯೋ ಸಂವಾದದ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ಲಭ್ಯತೆ, ಜಲಾಶಯಗಳ ನೀರಿನ ಮಟ್ಟ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ಮೊದಲ ಆದ್ಯತೆ ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ನೋಡಿಕೊಳ್ಳುವುದಾಗಿದೆ. ಈ ಹಿನ್ನೆಲೆಯಲ್ಲಿ ಕೆರೆ, ಡ್ಯಾಮ್ ಹಾಗೂ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಕೃಷಿ, ಲಿಫ್ಟ್ ಇರಿಗೇಶನ್, ವಾಹನ ತೊಳೆಯುವುದು, ಕೈಗಾರಿಕಾ ಬಳಕೆ ಸೇರಿದಂತೆ ಅನಿವಾರ್ಯವಲ್ಲದ ಉದ್ದೇಶಗಳಿಗೆ ನೀರು ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಕೆರೆ ಹಾಗೂ ಜಲಾಶಯಗಳಿಂದ ಅನಧಿಕೃತವಾಗಿ ನೀರು ಎತ್ತುತ್ತಿರುವ ಪಂಪ್‌ಸೆಟ್‌ಗಳನ್ನು ತಕ್ಷಣ ತೆರವುಗೊಳಿಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲಾಧಿಕಾರಿಗಳು ಯಾವುದೇ ಕಾರಣಕ್ಕೂ ಲಿಫ್ಟ್ ಇರಿಗೇಶನ್‌ಗೆ ಅನುಮತಿ ನೀಡಬಾರದು ಎಂದು ಸೂಚಿಸಿದರು.
ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾದಲ್ಲಿ ಪರಿಸ್ಥಿತಿಯನ್ನು ಮರುಪರಿಶೀಲಿಸಿ ಸರ್ಕಾರ ಅಗತ್ಯ ನಿರ್ಧಾರ ಕೈಗೊಳ್ಳಲಿದೆ. ಅಲ್ಲಿಯವರೆಗೆ ಜಾರಿಯಲ್ಲಿರುವ ಎಲ್ಲ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗದಗ ಜಿಲ್ಲಾಡಳಿತ ಭವನದಿಂದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಸರ್ಕಾರದ ಎಲ್ಲ ನಿರ್ದೇಶನಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಕೆರೆ ಹಾಗೂ ಜಲಾಶಯಗಳ ನೀರಿನ ಮಟ್ಟವನ್ನು ನಿರಂತರವಾಗಿ ಪರಿಶೀಲಿಸಿ, ಅನಧಿಕೃತ ನೀರು ಬಳಕೆಯನ್ನು ತಡೆಯಲಾಗುವುದು. ಬೇಸಿಗೆಯವರೆಗೆ ಜಿಲ್ಲೆಯ ಜನರಿಗೆ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಲಸಂಪನ್ಮೂಲ, ಸಣ್ಣ ನೀರಾವರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
“ಕುಡಿಯುವ ನೀರು ಸಾರ್ವಜನಿಕರ ಹಕ್ಕು. ಯಾವುದೇ ಕಾರಣಕ್ಕೂ ಕೆರೆ, ಡ್ಯಾಮ್ ಹಾಗೂ ಜಲಾಶಯಗಳ ನೀರನ್ನು ಅನಿವಾರ್ಯವಲ್ಲದ ಉದ್ದೇಶಗಳಿಗೆ ಬಳಸಲು ಅವಕಾಶ ನೀಡಬಾರದು. ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.”
– ಗೌರವ್ ಗುಪ್ತಾ, ಅಪರ ಮುಖ್ಯ ಕಾರ್ಯದರ್ಶಿ, ಜಲಸಂಪನ್ಮೂಲ ಇಲಾಖೆ



