ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.
ವಾರ್ಡ್ ಪುನರ್ ವಿಂಗಡನೆ ಹಾಗೂ ಮೀಸಲಾತಿ ಪ್ರಕ್ರಿಯೆಗಳು ಪೂರ್ಣಗೊಂಡಿರುವುದಾಗಿ ಸರ್ಕಾರ ಕೋರ್ಟ್‌ಗೆ ಮಾಹಿತಿ ನೀಡಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಜೂನ್ 30ರ ಗಡುವು ವಿಧಿಸಿತ್ತು.
ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಅಗತ್ಯವಾದ ಎಲ್ಲ ಪೂರ್ವ ಪ್ರಕ್ರಿಯೆಗಳನ್ನು ಸರ್ಕಾರ ಪೂರ್ಣಗೊಳಿಸಿದ್ದು, ಇದೀಗ ಚುನಾವಣಾ ದಿನಾಂಕದ ಬಗ್ಗೆ ಅಂತಿಮ ನಿರ್ಧಾರವನ್ನು ಚುನಾವಣಾ ಆಯೋಗ ತೆಗೆದುಕೊಳ್ಳಲಿದೆ.
ಇದಕ್ಕೂ ಮುನ್ನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಗೆ ಕೊನೆಯ ಬಾರಿ 2015ರ ಆಗಸ್ಟ್‌ನಲ್ಲಿ ಚುನಾವಣೆ ನಡೆದಿತ್ತು. ಅದರ ಅವಧಿ 2020ರ ಸೆಪ್ಟೆಂಬರ್‌ನಲ್ಲಿ ಮುಕ್ತಾಯಗೊಂಡಿತ್ತು.



