ಬೀದರ್: ಔರಾದ್ ತಾಲೂಕಿನ ಗುಡಪಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ಮೇಲೆ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಗುಡಪಳ್ಳಿ ಗ್ರಾಮ ಪಂಚಾಯಿತಿಯ ಡಾಟಾ ಎಂಟ್ರಿ ಆಪರೇಟರ್ ಮಹದೇವ ಅವರ ಮೇಲೆ ಸದಸ್ಯ ಏಕಾಏಕಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಸದಸ್ಯನ ಕೆಲಸದ ಅವಧಿ ಮುಗಿದಿದ್ದರೂ ಕಚೇರಿಗೆ ನುಗ್ಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಹಲ್ಲೆಯ ದೃಶ್ಯಗಳಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಈ ಘಟನೆ ಸುಮಾರು ಒಂದು ವರ್ಷದ ಹಿಂದೆಯೇ ನಡೆದಿದೆ ಎನ್ನಲಾಗುತ್ತಿದ್ದು, ಹಳೆಯ ವಿಡಿಯೋ ಇದೀಗ ವೈರಲ್ ಆಗಿದೆ ಎಂದು ತಿಳಿದುಬಂದಿದೆ.
ಹಳೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಘಟನೆ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. ಹಲ್ಲೆ ನಡೆಸಿದ ಸದಸ್ಯನ ವಿರುದ್ಧ ತಕ್ಷಣ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವೈಯಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಡಾಟಾ ಎಂಟ್ರಿ ಆಪರೇಟರ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಚಿಂತಾಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.



