ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ವಿಚಾರ ಇತ್ತೀಚೆಗೆ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ಮಹಿಳೆಯರಿಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ.
ಸೋಮವಾರದಿಂದ ಶನಿವಾರದ ಒಳಗೆ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ಸಚಿವೆ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ಮುಂದಿನ ವಾರ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ ಎಂದು ಹೇಳಿದರು.
ಇನ್ನೂ ಮೃತಪಟ್ಟವರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ತಪ್ಪಾಗಿ ಜಮೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವೆ, ಈ ವಿಷಯವಾಗಿ ಮುಖ್ಯ ಕಾರ್ಯದರ್ಶಿ (CS) ನೇತೃತ್ವದಲ್ಲಿ ಎರಡು ಬಾರಿ ಸಭೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು. ಮೃತಪಟ್ಟವರ ಖಾತೆಗೆ ಹಣ ಜಮೆಯಾಗಿದೆಯೇ ಎಂಬುದು ತಕ್ಷಣ ಪತ್ತೆಯಾಗುವುದಿಲ್ಲ. ಇದಕ್ಕಾಗಿ ಹೊಸ ಸಾಫ್ಟ್‌ವೇರ್ ವ್ಯವಸ್ಥೆ ಅಳವಡಿಸಲಾಗಿದೆ ಎಂದು ಅವರು ಹೇಳಿದರು.
ಮರಣ ಪ್ರಮಾಣ ಪತ್ರಗಳನ್ನು ಅಂಗನವಾಡಿ ಕಾರ್ಯಕರ್ತರು ಪರಿಶೀಲನೆ ಮಾಡಲಿದ್ದು, ಈ ಮೂಲಕ ಸತ್ತವರ ಖಾತೆಗೆ ಹಣ ಜಮೆಯಾಗುವುದನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ತಪ್ಪಾಗಿ ಸಂದಾಯವಾಗಿರುವ ಹಣವನ್ನು ವಾಪಸ್ ಪಡೆಯುವ ಹೊಣೆಗಾರಿಕೆಯನ್ನು ಕೆಲ ಬ್ಯಾಂಕ್‌ಗಳಿಗೆ ನೀಡಲಾಗಿದ್ದು, ಈ ಸಂಬಂಧ ಮುಖ್ಯ ಕಾರ್ಯದರ್ಶಿಗಳು ಬ್ಯಾಂಕ್‌ಗಳಿಗೆ ನೋಟಿಸ್ ನೀಡಿದ್ದು, ಪತ್ರವೂ ಬರೆದಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.



