ಚಿಕ್ಕೋಡಿ: ಲೈಂಗಿಕ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ಮಹಿಳೆಯೊಬ್ಬಳು ತನ್ನ ಶಾಲಾ ಗೆಳೆಯನೊಂದಿಗೆ ಸೇರಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಸೆಪ್ಟೆಂಬರ್ 21ರಂದು ನಡೆದಿದ್ದ ಕೊಲೆ ಪ್ರಕರಣದಲ್ಲಿ ಮೃತನನ್ನು ರಣವೀರ ರಜಪೂತ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀದೇವಿ ರಜಪೂತ ಹಾಗೂ ಬೈರು ಪವಾರ್ ಎಂಬ ಇಬ್ಬರನ್ನು ಅಥಣಿ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಶ್ರೀದೇವಿಗೆ ರಣವೀರ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಆತನನ್ನು ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 21ರ ರಾತ್ರಿ ಬೈಕ್ ಸ್ಟಾರ್ಟ್ ಆಗುತ್ತಿಲ್ಲ ಎಂದು ಹೇಳಿ ಬೈರು ಪವಾರ್, ರಣವೀರನನ್ನು ಕರೆಸಿಕೊಂಡಿದ್ದಾನೆ. ಬಳಿಕ ಆತನ ಕುತ್ತಿಗೆ ಹಿಸುಕಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಹತ್ಯೆಯ ನಂತರ ಬೈರು, ಶ್ರೀದೇವಿಗೆ ಕರೆ ಮಾಡಿದ್ದ ಎನ್ನಲಾಗಿದೆ. ಪ್ರಕರಣದ ತನಿಖೆ ನಡೆಸಿದ ಅಥಣಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.



