ರಾಯಚೂರು: ಮನೆ ಮುಂದೆ ಆಟವಾಡುತ್ತಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆ.ಹಂಚಿಕಾಳ ಕ್ಯಾಂಪ್ನಲ್ಲಿ ನಡೆದಿದೆ.
ಮೃತ ಮಗುವನ್ನು 18 ತಿಂಗಳ ಅನಂ ಎಂದು ಗುರುತಿಸಲಾಗಿದೆ. ಮಗು ನಿದ್ದೆಯಿಂದ ಎದ್ದು ಮನೆ ಮುಂದೆ ಆಟವಾಡುತ್ತಿದ್ದಾಗ ಏಕಾಏಕಿ ಆರೇಳು ಬೀದಿನಾಯಿಗಳು ದಾಳಿ ಮಾಡಿವೆ.
ಬೀದಿನಾಯಿಗಳು ಮಗುವನ್ನು ಎಳೆದಾಡಿ ಕಚ್ಚಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವೈದ್ಯರು ಚಿಕಿತ್ಸೆ ನೀಡಿದರೂ ಮಗು ಬದುಕುಳಿಯಲಿಲ್ಲ.
ಘಟನೆ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರಾಮದಲ್ಲಿ ಬೀದಿನಾಯಿಗಳ ಸಂಖ್ಯೆ ಹೆಚ್ಚಾಗಿದ್ದು, ಅವುಗಳ ಹಾವಳಿ ತಡೆಯಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.



