ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಭಾಗಗಳಲ್ಲಿ ಇಂದು ಮಳೆಯಾಗಿದೆ.
ಮೈಸೂರು ರಸ್ತೆ, ಟೌನ್ ಹಾಲ್, ಚಾಮರಾಜಪೇಟೆ, ಕಾರ್ಪೊರೇಷನ್, ಕೆಆರ್ ಸರ್ಕಲ್, ಕೆಆರ್ ಮಾರ್ಕೆಟ್, ಮಲ್ಲೇಶ್ವರಂ, ಶೇಷಾದ್ರಿಪುರಂ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.
ಮಳೆ ಹಿನ್ನೆಲೆಯಲ್ಲಿ ಕೆಲವೆಡೆ ಸಂಚಾರ ನಿಧಾನಗತಿಯಲ್ಲಿ ಸಾಗಿದ್ದು, ರಸ್ತೆಯಲ್ಲಿ ಸಂಚರಿಸುವವರು ತೊಂದರೆ ಅನುಭವಿಸಿದರು.
ಇನ್ನು ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಳೆಗಾಲದ ನಡುವೆಯೂ ಕೆಲವೆಡೆ ಬಿಸಿಲಿನ ತೀವ್ರತೆ ಹೆಚ್ಚಾಗಿ ಬೇಸಿಗೆಯ ಅನುಭವವಾಗುತ್ತಿದ್ದು, ಇದೀಗ ಮತ್ತೆ ಮಳೆ ಚುರುಕುಗೊಂಡಿದೆ. ಜುಲೈ 18 ಮತ್ತು 19ರಂದು ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.



