ಬೆಂಗಳೂರು: ಮುಂಗಾರು ಮಳೆಯ ಕೊರತೆಯಿಂದ ರಾಜ್ಯದ ಹಲವು ಜಿಲ್ಲೆಗಳು ಬರದ ಪರಿಸ್ಥಿತಿ ಎದುರಿಸುತ್ತಿರುವ ನಡುವೆಯೇ, ಕಳೆದ ಕೆಲ ದಿನಗಳಿಂದ ಹಲವೆಡೆ ವರುಣ ಅಬ್ಬರಿಸುತ್ತಿದ್ದಾನೆ.
ಇದೀಗ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಅಕ್ಟೋಬರ್ 9ರಂದು ಉತ್ತಮ ಮಳೆಯ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ 64ರಿಂದ 115 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಯೆಲ್ಲೋ ಅಲರ್ಟ್ ಘೋಷಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಸೇರಿದಂತೆ ಒಟ್ಟು 13 ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ.
ಇನ್ನು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದ್ದರೆ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.
ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಕೂಡ ಬಹುತೇಕ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



