ಬೆಂಗಳೂರು: ವಿವಿಧ ವಲಯಗಳ ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು (ವೇತನ ಸಹಿತ) ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಇತ್ತೀಚಿನ ನಿರ್ದೇಶನವನ್ನು ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ (ಬಿಎಚ್‌ಎ) ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಹೋಟೆಲ್ ಮಾಲೀಕರ ಸಂಘದ ವಾದ ಆಲಿಸಿ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ.
ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಪರ ವಕೀಲರ ವಾದ ಆಲಿಸಿದ ಹೈ ಕೋರ್ಟ್ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಹೋಟೆಲ್ ಮಾಲೀಕರ ಸಂಘದ ಮಾನ್ಯ ಉಚ್ಚ ನ್ಯಾಯಾಲಯದ ಮುಂದೆ ಇಂದು ಅರ್ಜಿ ವಿಚಾರಣೆಗೆ ಬಂದಿದ್ದು, ಹೋಟೆಲ್ ಮಾಲೀಕರ ಸಂಘದ ಪರ ವಕೀಲರಾದ ಪ್ರಶಾಂತ್ ಬಿ.ಕೆ ವಾದ ಮಂಡಿಸಿದ್ದರು.
ಕರ್ನಾಟಕ ಸರ್ಕಾರ ನವೆಂಬರ್ 12ರಂದು ವೇತನ ಸಹಿತ ಮುಟ್ಟಿನ ರಜೆ ಕಡ್ಡಾಯಗೊಳಿಸುವ ನಿರ್ಧಾರ ತೆಗೆದುಕೊಂಡಿತ್ತು. ಕಾರ್ಮಿಕ ಇಲಾಖೆಯು ಕಾರ್ಖಾನೆ ಕಾಯ್ದೆ, ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆ ಸೇರಿದಂತೆ ಹಲವಾರು ಕಾರ್ಮಿಕ ಕಾನೂನುಗಳ ವ್ಯಾಪ್ತಿಗೆ ಬರುವ ಸಂಸ್ಥೆಗಳು ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆಯನ್ನು ಒದಗಿಸುವಂತೆ ಆದೇಶವನ್ನು ಹೊರಡಿಸಿತ್ತು.
ಆದರೆ ಇತ್ತೀಚೆಗೆ ಸರ್ಕಾರದ ಈ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿದ್ದು, ರಾಜ್ಯ ಸರ್ಕಾರಕ್ಕೆ ಅಂತಹ ಆದೇಶವನ್ನು ವಿಧಿಸಲು ಕಾರ್ಮಿಕ ಕಾನೂನುಗಳ ಪ್ರಕಾರ ಅಧಿಕಾರವಿಲ್ಲವೆಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಹೈಕೋರ್ಟ್ ಮೆಟ್ಟಿಲೇರಿತ್ತು. ಸರ್ಕಾರವು 1948 ರ ಕಾರ್ಖಾನೆ ಕಾಯ್ದೆ, 1961 ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ,
1951 ರ ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, 1966 ರ ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು 1961 ರ ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆಯಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಂಸ್ಥೆಗಳಿಗೆ ಮೇಲೆ ತಿಳಿಸಿದ ನೀತಿಯನ್ನು ಅನುಸರಿಸಲು ನಿರ್ದೇಶನ ನೀಡುವ ಅಧಿಸೂಚನೆಯನ್ನು ಹೊರಡಿಸಿದೆ. ಆದರೆ ರಜೆ ನೀತಿಗಳು ವೈಯಕ್ತಿಕ ಸಂಸ್ಥೆಗಳಿಗೆ ಆಂತರಿಕ ಆಡಳಿತಾತ್ಮಕ ವಿಷಯವಾಗಿ ಉಳಿಯಬೇಕು ಎಂದು ಹೋಟೆಲ್ ಮಾಲೀಕರ ಸಂಘ ಅರ್ಜಿ ಸಲ್ಲಿಸಿತ್ತು.



