HomeKarnataka NewsHIV ನಿಂದನೆ ಆರೋಪ: ವಿಚ್ಛೇದನ ಆದೇಶ ರದ್ದು ಮಾಡಿದ ಹೈಕೋರ್ಟ್

HIV ನಿಂದನೆ ಆರೋಪ: ವಿಚ್ಛೇದನ ಆದೇಶ ರದ್ದು ಮಾಡಿದ ಹೈಕೋರ್ಟ್

For Dai;y Updates Join Our whatsapp Group

Spread the love

ಬೆಂಗಳೂರು: ಹೆಚ್‌ಐವಿ ಸೋಂಕಿನಿಂದ ಬಳಲುತ್ತಿದ್ದೇನೆ ಎಂದು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ನಿಂದಿಸಿದ್ದಾರೆ ಎಂಬ ಆರೋಪದ ಆಧಾರದ ಮೇಲೆ ಪತಿಗೆ ಕೌಟುಂಬಿಕ ನ್ಯಾಯಾಲಯ ನೀಡಿದ್ದ ವಿಚ್ಛೇದನ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಪತಿ ಪರವಾಗಿ ನೀಡಲಾಗಿದ್ದ ವಿಚ್ಛೇದನ ಆದೇಶವನ್ನು ಪ್ರಶ್ನಿಸಿ ಪತ್ನಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಕಲಬುರಗಿ ವಿಭಾಗೀಯ ಪೀಠ ಈ ಮಹತ್ವದ ಆದೇಶ ನೀಡಿದೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಹಾಗೂ ನ್ಯಾಯಮೂರ್ತಿ ಡಾ. ಚಿಲ್ಲಕೂರ್ ಸುಮಲತಾ ಅವರನ್ನೊಳಗೊಂಡ ಪೀಠ ಪ್ರಕರಣವನ್ನು ಮರುಪರಿಶೀಲನೆಗಾಗಿ ವಿಚಾರಣಾಧೀನ ಕೌಟುಂಬಿಕ ನ್ಯಾಯಾಲಯಕ್ಕೆ ಹಿಂತಿರುಗಿಸಿದೆ.

ಗಂಭೀರ ಸ್ವರೂಪದ ಆರೋಪಗಳನ್ನು ಯಾವುದೇ ದಾಖಲೆಗಳಿಲ್ಲದೆ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಹೆಚ್‌ಐವಿ ಅಥವಾ ಏಡ್ಸ್ ಸೋಂಕು ತಗಲಿರುವುದಾಗಿ ಆರೋಪಿಸುವುದು ಸಾಬೀತಾದರೆ ಅದು ಮಾನಸಿಕ ಕ್ರೌರ್ಯಕ್ಕೆ ಒಳಪಡಬಹುದು. ಆದರೆ ಅಂತಹ ಆರೋಪಕ್ಕೆ ಪೂರಕವಾದ ದಾಖಲೆಗಳು ಸಲ್ಲಿಕೆಯಾಗಿಲ್ಲ. ಕೇವಲ ಪತಿಯ ಹೇಳಿಕೆಗಳನ್ನೇ ಆಧರಿಸಿ ಆದೇಶ ನೀಡಲು ಅವಕಾಶವಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಪತಿಯು ತಮ್ಮ ಆರೋಪವನ್ನು ಸಾಬೀತುಪಡಿಸಲು ಅಗತ್ಯ ದಾಖಲೆಗಳು ಅಥವಾ ಸಮರ್ಪಕ ಸಾಕ್ಷ್ಯ ಒದಗಿಸಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಇದೇ ವೇಳೆ, ಯಾವುದೇ ದೃಢ ಸಾಕ್ಷ್ಯವಿಲ್ಲದೆ ಪತಿಯ ಆರೋಪವನ್ನು ಒಪ್ಪಿಕೊಂಡು ಪತ್ನಿಯ ವಾದವನ್ನು ತಳ್ಳಿಹಾಕಿರುವ ಕೌಟುಂಬಿಕ ನ್ಯಾಯಾಲಯದ ಕ್ರಮವನ್ನು ಹೈಕೋರ್ಟ್ ಪ್ರಶ್ನಿಸಿದೆ.

ವಿಚಾರಣೆ ವೇಳೆ ಪತ್ನಿಯ ಪರ ವಕೀಲರು, ಪತಿಯ ಅನೈತಿಕ ಸಂಬಂಧದ ಕಾರಣದಿಂದಲೇ ಪತ್ನಿ ತನ್ನ ಪೋಷಕರ ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಪ್ರಕರಣದ ಹಿನ್ನೆಲೆ:
ದಂಪತಿ 2002ರ ಜೂನ್ 16ರಂದು ವಿವಾಹವಾಗಿದ್ದು, ಅವರಿಗೆ ಇಬ್ಬರು ಪುತ್ರರು ಇದ್ದಾರೆ. ಪತ್ನಿ ಖಾಸಗಿ ಶಾಲೆಯ ಪ್ರಿನ್ಸಿಪಾಲ್ ಆಗಿದ್ದು, ಪತಿ ಸಾಂಖ್ಯಿಕ ಇನ್‌ಸ್ಪೆಕ್ಟರ್ ಆಗಿದ್ದಾರೆ.

ಮದುವೆಯ ಆರಂಭದಲ್ಲಿ ಜೀವನ ಸುಗಮವಾಗಿದ್ದರೂ ಬಳಿಕ ಪತ್ನಿ ಮಕ್ಕಳೊಂದಿಗೆ ತವರು ಮನೆಗೆ ತೆರಳಿದ್ದರು. ಹಲವು ಬಾರಿ ಮನವೊಲಿಸಿದರೂ ಮರಳಿ ಬಾರದ ಹಿನ್ನೆಲೆಯಲ್ಲಿ ಹಾಗೂ ನಿಂದನೆ ಆರೋಪದ ಆಧಾರದಲ್ಲಿ ಪತಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ಬೀದರ್ ಕೌಟುಂಬಿಕ ನ್ಯಾಯಾಲಯ ಪುರಸ್ಕರಿಸಿ ವಿಚ್ಛೇದನ ಮಂಜೂರು ಮಾಡಿತ್ತು. ಅದನ್ನು ಪ್ರಶ್ನಿಸಿ ಪತ್ನಿ ಹೈಕೋರ್ಟ್ ಮೆಟ್ಟಿಲೇರಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!