ಚಿಕ್ಕಬಳ್ಳಾಪುರ: ಜಿಲ್ಲೆಯ ಭಾಗ್ಯನಗರ ಪಟ್ಟಣದಲ್ಲಿ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ದುರ್ಮರಣ ಹೊಂದಿದ ಹೃದಯವಿದ್ರಾವಕ ಘಟನೆ ನಡೆದಿದೆ. ಕೂಲಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಆಟೋಗೆ ವೇಗವಾಗಿ ಬಂದ ಥಾರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ ಸ್ಥಳದಲ್ಲಿದ್ದವರ ಮನಕಲಕುವಂತಿತ್ತು. ಅಪಘಾತದ ತೀವ್ರತೆಗೆ ಆಟೋದಲ್ಲಿದ್ದ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಆತಂಕಕಾರಿ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ಕಾರಣವಾದ ಥಾರ್ ವಾಹನದ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯೇ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



