ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸಿದರೆ ರಾಜ್ಯ ಸರ್ಕಾರದ ವಿರುದ್ಧ ತಾನೇ ಹೋರಾಟ ನಡೆಸುವುದಾಗಿ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಗಣಿಗ ರವಿಕುಮಾರ್, ತಾವು ರೈತರ ಪರವಾಗಿದ್ದು, ರೈತರಿಗಾಗಿ ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಸರ್ಕಾರ ತಮಿಳುನಾಡಿಗೆ ನೀರು ಹರಿಸಿದರೆ ಸರ್ಕಾರದ ವಿರುದ್ಧವೇ ಹೋರಾಟ ನಡೆಸಬೇಕಾದ ಪರಿಸ್ಥಿತಿ ಎದುರಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಸಂಸದರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ. ಅವರು ರಾಜ್ಯ ಸರ್ಕಾರದ ಬಗ್ಗೆ ವಿವಿಧ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶವಾಗಿದೆ ಎಂಬ ಮಾಹಿತಿ ಇದೆ. ಆದರೆ, ಯಾವ ರೀತಿಯ ಆದೇಶ ನೀಡಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಗಣಿಗ ರವಿಕುಮಾರ್ ಹೇಳಿದ್ದಾರೆ.
ಸದ್ಯ ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರು ತಮಿಳುನಾಡಿನತ್ತ ಹರಿಯುತ್ತಿದೆ. ಆದರೆ, ರಾಜ್ಯ ಸರ್ಕಾರ ತಮಿಳುನಾಡಿಗೆ ಪ್ರತ್ಯೇಕವಾಗಿ ನೀರು ಬಿಟ್ಟಿಲ್ಲ ಎಂದು ಅವರು ತಿಳಿಸಿದ್ದಾರೆ.
ಒಂದು ವೇಳೆ ಸರ್ಕಾರ ತಮಿಳುನಾಡಿಗೆ ನೀರು ಹರಿಸಲು ಮುಂದಾದರೆ, ರೈತರ ಪರವಾಗಿ ತಾನೇ ಸರ್ಕಾರದ ವಿರುದ್ಧ ಹೋರಾಟ ನಡೆಸುವುದಾಗಿ ಗಣಿಗ ರವಿಕುಮಾರ್ ಪುನರುಚ್ಚರಿಸಿದ್ದಾರೆ.



