ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕಾರ್ಯವನ್ನು ಯಶಸ್ವಿಯಾಗಿ ನಡೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಅಮಿತ್ ಬಿದರಿ ಹೇಳಿದರು.
ಮಂಗಳವಾರ ಪಟ್ಟಣದ ಉಮಾ ವಿದ್ಯಾಲಯದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಮಾಡುವ ಮೂಲಕ ಜನರ ಜೀವನಮಟ್ಟ ಸುಧಾರಿಸಲು ಬೇಕಾಗುವ ಯೋಜನೆ ರೂಪಿಸಲು ಅನುಕೂಲವಾಗುತ್ತದೆ ಎನ್ನುವ ಉದ್ದೇಶ ಹೊಂದಿದೆ. ಸಾಮಾಜಿಕವಾಗಿ ಹಿಂದುಳಿದ ವರ್ಗಗಳು ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳು ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದಲ್ಲಿ ಅನುಕೂಲವಾಗುತ್ತದೆ.
ಅದಕ್ಕಾಗಿ ಶಿಕ್ಷಕರು ತಾಲೂಕಿನಲ್ಲಿ ಪ್ರತಿ ಮನೆಗೂ ಭೇಟಿ ನೀಡಿ ಆ ಕುಟುಂಬದ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಮಾಹಿತಿ ನೀಡಬೇಕು. ಗಣತಿ ಕಾರ್ಯದಲ್ಲಿ ಆಗುವ ತೊಂದರೆಗಳ ಕುರಿತು ನೀವು ಮುಕ್ತವಾಗಿ ತಿಳಿಸಿ, ಸಮಸ್ಯೆಗೆ ಪರಿಹಾರ ನೀಡುವ ಕಾರ್ಯವನ್ನು ಅಧಿಕಾರಿಗಳು ಮಾಡುತ್ತಾರೆ ಎಂದು ಅವರು ಹೇಳಿದರು.
ಈ ವೇಳೆ ತಹಸೀಲ್ದಾರ ಧನಂಜಯ ಎಂ, ತಾ.ಪಂ. ಇಓ ಕೃಷ್ಣಪ್ಪ ಧರ್ಮರ, ಬಿಆರ್‌ಪಿ ಈಶ್ವರ ಮೆಡ್ಲೇರಿ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮರಿಗೌಡರ, ಗುಂಜಳ ಸೇರಿ ಸುಮಾರು 250 ಮಂದಿ ಶಿಕ್ಷಕರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇದ್ದರು.



