ಬೆಂಗಳೂರು: ಮೇಕೆದಾಟು ಯೋಜನೆಗೆ ತಮಿಳುನಾಡು ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿರುವ ಬೆನ್ನಲ್ಲೇ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ನಡೆಸಿ ನಿಮ್ಮ ಬದ್ಧತೆಯನ್ನು ಸಾಬೀತುಪಡಿಸಿ ಎಂದು ಸವಾಲು ಹಾಕಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಆರ್. ಅಶೋಕ್, ಅಧಿಕಾರಕ್ಕೆ ಬರಲು ಮೇಕೆದಾಟು ಪಾದಯಾತ್ರೆ ನಡೆಸಿದ್ದ ಡಿ.ಕೆ. ಶಿವಕುಮಾರ್ ಅವರು ಈಗ ತಮಿಳುನಾಡು ಕಾಂಗ್ರೆಸ್ ನಾಯಕರ ಹೇಳಿಕೆ ಎದುರು ಮೌನವಾಗಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.
“ಚುನಾವಣೆಗೆ ಮುನ್ನ ಮೇಕೆದಾಟು ಯೋಜನೆ ಹೆಸರಿನಲ್ಲಿ ಪಾದಯಾತ್ರೆ ನಡೆಸಿದ್ದ ನೀವು, ಈಗ ನಿಮ್ಮದೇ ಪಕ್ಷದ ತಮಿಳುನಾಡು ಘಟಕದ ಅಧ್ಯಕ್ಷರು ‘ಮೇಕೆದಾಟು ಯೋಜನೆಗೆ ಒಂದು ಇಟ್ಟಿಗೆ ಹಾಕಲೂ ಬಿಡುವುದಿಲ್ಲ’ ಎಂದು ಹೇಳಿದರೂ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ.
ನಿಜವಾಗಿಯೂ ಕನ್ನಡಿಗರ ಹಿತದ ಬಗ್ಗೆ ಕಾಳಜಿ ಇದ್ದರೆ ಚೆನ್ನೈಗೆ ಪಾದಯಾತ್ರೆ ನಡೆಸಿ, ತಮಿಳುನಾಡು ಕಾಂಗ್ರೆಸ್ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಿ ನಿಮ್ಮ ರಾಜಕೀಯ ಬದ್ಧತೆಯನ್ನು ಸಾಬೀತುಪಡಿಸಿ” ಎಂದು ಅಶೋಕ್ ಸವಾಲು ಹಾಕಿದ್ದಾರೆ.
ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ಲಾಭಕ್ಕಾಗಿ ನಡೆಸಿದ ರಾಜಕೀಯ ನಾಟಕವಾಗಿತ್ತೇ ಎಂಬ ಪ್ರಶ್ನೆಯನ್ನೂ ಅವರು ಎತ್ತಿದ್ದಾರೆ. ಕಾವೇರಿ ಕೊಳ್ಳದ ರೈತರು ಹಾಗೂ ಬೆಂಗಳೂರಿನ ಕೋಟ್ಯಂತರ ಜನರ ಕುಡಿಯುವ ನೀರಿನ ಹಕ್ಕಿಗಿಂತ ಕಾಂಗ್ರೆಸ್ ಹೈಕಮಾಂಡ್ ಮತ್ತು ತಮಿಳುನಾಡಿನ ಮೈತ್ರಿ ರಾಜಕಾರಣವೇ ಮುಖ್ಯವಾಗಿದೆಯೇ ಎಂದು ಟೀಕಿಸಿದ್ದಾರೆ.
ರಾಜ್ಯ ಸರ್ಕಾರಕ್ಕೆ ಮೇಕೆದಾಟು ಯೋಜನೆ ಜಾರಿಗೊಳಿಸುವ ಇಚ್ಛಾಶಕ್ತಿಯೇ ಇಲ್ಲ ಎಂದು ಆರೋಪಿಸಿರುವ ಅಶೋಕ್, ತಮಿಳುನಾಡು ಕಾಂಗ್ರೆಸ್ನ ಹೇಳಿಕೆಯನ್ನು ಖಂಡಿಸಲು ಸಹ ರಾಜ್ಯ ಕಾಂಗ್ರೆಸ್ ನಾಯಕರು ಮುಂದಾಗದಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.
ಕನ್ನಡಿಗರ ಹಿತಾಸಕ್ತಿಗೆ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಈ ವಿಚಾರದಲ್ಲಿ ಸರ್ಕಾರದ ನಿಲುವಿಗೆ ರಾಜ್ಯದ ಜನರು ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.



