ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟಕ್ಕೆ ಮುಂದಾಗಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ಮಧ್ಯಪ್ರದೇಶ ಮೂಲದ ಗನ್ ಡೀಲರ್‌ನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಸೈಯದ್ ಇರ್ಫಾನ್ ರಿಜ್ವಿಯಿಂದ 3 ಕಂಟ್ರಿಮೇಡ್ ಪಿಸ್ತೂಲ್‌ಗಳು ಹಾಗೂ 2 ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಮಸೂದ್ ಮತ್ತು ಜಾವೀದ್ ಎಂಬ ಇಬ್ಬರು ಆರೋಪಿಗಳನ್ನು ಯಶವಂತಪುರ ರೈಲು ನಿಲ್ದಾಣದ ಬಳಿ ಬಂಧಿಸಲಾಗಿತ್ತು. ಅವರಿಂದ ಒಂದು ಪಿಸ್ತೂಲ್ ಹಾಗೂ 52 ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿತ್ತು.
ವಿಚಾರಣೆ ವೇಳೆ ಈ ಜಾಲದ ಮಾಸ್ಟರ್ ಮೈಂಡ್ ಸೈಯದ್ ಇರ್ಫಾನ್ ರಿಜ್ವಿ ಎಂಬುದು ಬೆಳಕಿಗೆ ಬಂದಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಮಧ್ಯಪ್ರದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಮಧ್ಯಪ್ರದೇಶದಿಂದ ಬೆಂಗಳೂರಿಗೆ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಸಾಗಿಸಿ ಅಪರಾಧ ಹಿನ್ನೆಲೆಯುಳ್ಳವರಿಗೆ ಸರಬರಾಜು ಮಾಡುವುದು ಈ ಜಾಲದ ಉದ್ದೇಶವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಜಾಲದಲ್ಲಿ ಇನ್ನೂ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.



