ಯಾದಗಿರಿ: ಜಿಲ್ಲೆಯ ವಿವಿಧ ಹೋಟೆಲ್ ಮತ್ತು ಆಹಾರ ಮಳಿಗೆಗಳಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ದಿಢೀರ್ ಪರಿಶೀಲನೆ ನಡೆಸಿ ವಾಣಿಜ್ಯ ಉದ್ದೇಶಗಳಿಗೆ ಅಕ್ರಮವಾಗಿ ಬಳಸಲಾಗುತ್ತಿದ್ದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ಜಪ್ತಿ ಮಾಡಿದ್ದಾರೆ.
ಮಾರ್ಚ್ 12ರಂದು ನಡೆದ ಈ ಕಾರ್ಯಾಚರಣೆಯಲ್ಲಿ ನಗರದಲ್ಲಿನ ಹಲವಾರು ಹೋಟೆಲ್‌ಗಳು ಮತ್ತು ಆಹಾರ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಒಟ್ಟು 46 ಗೃಹಬಳಕೆಯ ಸಿಲಿಂಡರ್‌ಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.
ಗೃಹಬಳಕೆಗೆ ಮೀಸಲಾದ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗೆ ಅಕ್ರಮವಾಗಿ ಬಳಸುತ್ತಿರುವ ಕುರಿತು ಬಂದ ಮಾಹಿತಿಯ ಆಧಾರದಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ವೇಳೆ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಇಂತಹ ಅಕ್ರಮಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.



