ಮುಂಬೈ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಮುಂಬೈನ ಥಾಣೆಯಲ್ಲಿರುವ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರ ಹಾಗೂ ಮೈಕೈ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ಏಕನಾಥ್ ಶಿಂಧೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ವಿಶೇಷ ತಂಡವು ನಿರಂತರವಾಗಿ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದೆ. ಆಸ್ಪತ್ರೆಯಲ್ಲಿ ಅಗತ್ಯ ವೈದ್ಯಕೀಯ ಪರೀಕ್ಷೆಗಳು ನಡೆಯುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕಳೆದ ಕೆಲವು ದಿನಗಳಿಂದ ನಿರಂತರ ರಾಜಕೀಯ ಚಟುವಟಿಕೆಗಳು ಹಾಗೂ ಅತಿಯಾದ ಕೆಲಸದ ಒತ್ತಡದಿಂದಾಗಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಶುಕ್ರವಾರ ವಿಧಾನಮಂಡಲ ಅಧಿವೇಶನದ ವೇಳೆ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಸುಸ್ತು ಕೂಡ ಉಂಟಾಗಿತ್ತು ಎಂದು ತಿಳಿದುಬಂದಿದೆ.
ಆರೋಗ್ಯದ ಕಾರಣದಿಂದಾಗಿ ಏಕನಾಥ್ ಶಿಂಧೆ ಅವರ ಎಲ್ಲಾ ನಿಗದಿತ ಸಾರ್ವಜನಿಕ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಶಿವಸೇನೆ ಮೂಲಗಳು ತಿಳಿಸಿವೆ.



