ಗದಗ: ರಾಜ್ಯ ರಾಜಕೀಯದಲ್ಲಿ ನಾಲ್ಕು ದಶಕಗಳಿಗೂ ಅಧಿಕ ಅನುಭವ ಹೊಂದಿರುವ ಹಿರಿಯ ಕಾಂಗ್ರೆಸ್ ನಾಯಕ, ಗದಗ ಶಾಸಕ ಹಾಗೂ ಮಾಜಿ ಸಚಿವ ಎಚ್. ಕೆ. ಪಾಟೀಲ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಸ್ಥಾನ ನೀಡದಿರುವುದು ಉತ್ತರ ಕರ್ನಾಟಕಕ್ಕೆ ಮಾಡಿದ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಹಿರಿಯ ಮುಖಂಡ ಉಮರ್ ಫಾರೂಕ್ ಹುಬ್ಬಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಎಚ್.ಕೆ. ಪಾಟೀಲ ಅವರು ತಮ್ಮ ರಾಜಕೀಯ ಜೀವನದಲ್ಲಿ ಜವಳಿ, ನೀರಾವರಿ, ಕೃಷಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಕಾನೂನು ಹಾಗೂ ಸಂಸದೀಯ ವ್ಯವಹಾರಗಳಂತಹ ಹಲವು ಮಹತ್ವದ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು, ರಾಜ್ಯದ ಆಡಳಿತ ವ್ಯವಸ್ಥೆ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.
ಜನಸಾಮಾನ್ಯರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸಾವಿರಾರು ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಿ ರಾಜ್ಯಕ್ಕೆ ಮಾದರಿಯಾದ ಕಾರ್ಯ ಮಾಡಿದ್ದಾರೆ. 2013ರಿಂದ 2018ರ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ವೇಳೆ ಕರ್ನಾಟಕ ಪಂಚಾಯತ್‌ರಾಜ್ ಕ್ಷೇತ್ರದಲ್ಲಿ ಮಾಹಿತಿ ತಂತ್ರಜ್ಞಾನ ಬಳಕೆಗೆ ರಾಷ್ಟ್ರಮಟ್ಟದ ಮಾನ್ಯತೆ ದೊರಕುವಂತೆ ಇಲಾಖೆಯನ್ನು ಮುನ್ನಡೆಸಿದ ಕೀರ್ತಿಯೂ ಅವರಿಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿ ವಿಧಾನಮಂಡಲದ ಕಾರ್ಯನಿರ್ವಹಣೆಯನ್ನು ಸುಗಮಗೊಳಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದು, ಸರ್ಕಾರದ ಅನೇಕ ಮಹತ್ವದ ಮಸೂದೆಗಳನ್ನು ಯಶಸ್ವಿಯಾಗಿ ಮಂಡಿಸಿ ಅಂಗೀಕಾರಗೊಳಿಸುವಲ್ಲಿ ಸಮರ್ಥ ನಾಯಕತ್ವ ತೋರಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ರಾಜ್ಯದ ಗಡಿ ವಿವಾದ, ಕಾನೂನು ಸುಧಾರಣೆ ಹಾಗೂ ಅಕ್ರಮ ಗಣಿಗಾರಿಕೆ ತನಿಖೆ ಸೇರಿದಂತೆ ಹಲವಾರು ಸೂಕ್ಷ್ಮ ವಿಷಯಗಳಲ್ಲಿ ಸರ್ಕಾರದ ಪರವಾಗಿ ಸಮರ್ಥವಾಗಿ ನಿಂತು ಸಂವಿಧಾನಾತ್ಮಕ ನೆಲೆಯಲ್ಲಿ ಸರ್ಕಾರದ ನಿಲುವುಗಳನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಸ್ವಚ್ಛ ರಾಜಕಾರಣಿ, ಅಧ್ಯಯನಶೀಲ ನಾಯಕ ಹಾಗೂ ಆಡಳಿತ ಪರಿಣಿತ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಎಚ್.ಕೆ. ಪಾಟೀಲ ಅವರು ಕಾಂಗ್ರೆಸ್ ಪಕ್ಷದ ಸಂಕಷ್ಟದ ದಿನಗಳಲ್ಲಿಯೂ ಪಕ್ಷದ ಸಿದ್ಧಾಂತದ ಪರ ದೃಢವಾಗಿ ನಿಂತಿದ್ದಾರೆ. ಇಂತಹ ಅನುಭವಿ ನಾಯಕರಿಗೆ ಸಚಿವ ಸಂಪುಟದಲ್ಲಿ ಅವಕಾಶ ನೀಡದಿರುವುದು ಉತ್ತರ ಕರ್ನಾಟಕ ಭಾಗದ ಜನರಲ್ಲಿ ಬೇಸರ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಸೂಕ್ತ ಜವಾಬ್ದಾರಿ ನೀಡುವ ಮೂಲಕ ಅವರ ಅನುಭವವನ್ನು ರಾಜ್ಯದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ಉಮರ್ ಫಾರೂಕ್ ಹುಬ್ಬಳ್ಳಿ ಆಗ್ರಹಿಸಿದ್ದಾರೆ.



