ಸೇಲಂ: ತಮಿಳುನಾಡಿನ ಸೇಲಂ ಸಮೀಪ ಕೆಎಸ್‌ಆರ್‌ಟಿಸಿ ಬಸ್ಸೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯಿಂದ ಆತಂಕಕ್ಕೊಳಗಾದ ಪ್ರಯಾಣಿಕರು ತಕ್ಷಣವೇ ಬಸ್ಸಿನಿಂದ ಕೆಳಗಿಳಿದು ಸುರಕ್ಷಿತವಾಗಿ ಪಾರಾಗಿದ್ದಾರೆ. “ಚಾಲಕ ನಿದ್ದೆಯ ಮಂಪರಿನಲ್ಲಿ ಬಸ್ ಚಾಲನೆ ಮಾಡುತ್ತಿದ್ದದ್ದೇ ಅಪಘಾತಕ್ಕೆ ಕಾರಣ” ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.
ಅಪಘಾತದ ಬಳಿಕ ಆಕ್ರೋಶಗೊಂಡ ಕೆಲ ಪ್ರಯಾಣಿಕರು ಚಾಲಕನ ನಿರ್ಲಕ್ಷ್ಯತನವನ್ನು ಖಂಡಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಪ್ರಯಾಣಿಕರನ್ನು ಪರ್ಯಾಯ ಬಸ್ ಮೂಲಕ ಮದುರೈಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ.



