ತುಮಕೂರು: ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆತರಲಾಗಿದ್ದ ವ್ಯಕ್ತಿಯೊಬ್ಬರ ಸಾವಿನ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಆರೋಪಿಸಿ ಗ್ರಾಮಸ್ಥರು ಠಾಣೆಯೊಳಗೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ವ್ಯಾಪ್ತಿಯ ಯಳನಾಡು ಗ್ರಾಮದಲ್ಲಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ದೂರಿನ ಮೇರೆಗೆ ಹುಳಿಯಾರು ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದರು.
ಈ ವೇಳೆ ಸಿದ್ಧರಾಮೇಶ್ವರ ದೇವಸ್ಥಾನದ ಗುಡಿಗೌಡರಾದ ಕಾಂತರಾಜು ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತರಲಾಗಿತ್ತು. ವಿಚಾರಣೆ ವೇಳೆ ಕಾಂತರಾಜು ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬುದು ಮೃತನ ಸ್ನೇಹಿತರು ಮತ್ತು ಗ್ರಾಮಸ್ಥರ ಗಂಭೀರ ಆರೋಪವಾಗಿದೆ.
ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಗ್ರಾಮಸ್ಥರು ಠಾಣೆಗೆ ಮುತ್ತಿಗೆ ಹಾಕಿ, ಶವವನ್ನು ಠಾಣೆಯೊಳಗೇ ಇಟ್ಟು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದರು.
ಘಟನಾ ಸ್ಥಳಕ್ಕೆ ಮಾಜಿ ಸಚಿವ ಮಾಧುಸ್ವಾಮಿ ಭೇಟಿ ನೀಡಿ ಗ್ರಾಮಸ್ಥರ ಅಹವಾಲು ಆಲಿಸಿದರು. ಜೊತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪೊಲೀಸರ ಪ್ರಕಾರ, ಸಂಜೆ 5 ಗಂಟೆಗೆ ಆರು ಮಂದಿಯನ್ನು ಠಾಣೆಗೆ ಕರೆತರಲಾಗಿದ್ದು, ರಾತ್ರಿ 8:30ಕ್ಕೆ ವಿಚಾರಣೆ ಮುಗಿಸಿ ಕಳುಹಿಸಲಾಗಿದೆ. ಠಾಣೆಯಿಂದ ಹೊರಬಂದ ಬಳಿಕ ಕಾಂತರಾಜು ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಸ್ತುತ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಯುತ್ತಿದ್ದು, ಮೃತರ ಕುಟುಂಬಸ್ಥರಿಂದ ದೂರು ಪಡೆಯುವ ಪ್ರಕ್ರಿಯೆ ಮುಂದುವರಿದಿದೆ.



