ಬೆಂಗಳೂರು: ನಗರದ ವರ್ತೂರು ಗ್ರೌಂಡ್‌ನಲ್ಲಿ ವ್ಯಕ್ತಿಯೊಬ್ಬರ ರುಂಡ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ವರ್ತೂರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪತ್ತೆಯಾಗಿರುವ ರುಂಡ ಯಾರದ್ದು ಎಂಬುದು ಇನ್ನೂ ಖಚಿತವಾಗಿಲ್ಲ. ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ ಮಾಡಿ ರುಂಡವನ್ನು ತಂದು ಇಲ್ಲಿ ಎಸೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮತ್ತೊಂದೆಡೆ, ರುಂಡ ಪತ್ತೆಯಾದ ಸ್ಥಳದ ಸಮೀಪದಲ್ಲೇ ರೈಲ್ವೆ ಹಳಿ ಇರುವುದರಿಂದ, ರೈಲಿಗೆ ಸಿಲುಕಿ ಮೃತಪಟ್ಟ ವ್ಯಕ್ತಿಯ ದೇಹದ ಭಾಗವನ್ನು ನಾಯಿಗಳು ಎಳೆದು ತಂದಿರಬಹುದೇ ಎಂಬ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ.
ಘಟನೆ ಕೊಲೆಯೇ ಅಥವಾ ಆತ್ಮಹತ್ಯೆ ಪ್ರಕರಣವೇ ಎಂಬುದು ತನಿಖೆಯಿಂದಲೇ ಸ್ಪಷ್ಟವಾಗಬೇಕಿದೆ. ಸದ್ಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಸುತ್ತಮುತ್ತಲಿನ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆಹಾಕುತ್ತಿದ್ದಾರೆ.
ಈ ಕುರಿತು ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.



