ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಂತೆ ಹಳೆ ಪಿಂಚಣಿ ಯೋಜನೆ ಜಾರಿ ಹಾಗೂ ಅನುದಾನಿತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ. 17ರಂದು ಬೆಳಗಾವಿಯಲ್ಲಿ ಅಖಿಲ ಕರ್ನಾಟಕ ಪಿಂಚಣಿ ವಂಚಿತ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘ ಬೃಹತ್ ಹೋರಾಟ ನಡೆಸಲಿದೆ ಎಂದು ಸಂಘಟನೆಯ ಗದಗ ಜಿಲ್ಲಾಧ್ಯಕ್ಷ ಬಸವರಾಜ ಎಚ್. ಕೊರ್ಲಹಳ್ಳಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಹೋರಾಟದಲ್ಲಿ ರಾಜ್ಯದಲ್ಲಿರುವ ಸಂಘಟನೆಯ ಎಲ್ಲ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಳ್ಳಲಿದ್ದು, ಗದಗ ಜಿಲ್ಲಾ ಹಾಗೂ ಎಲ್ಲ ತಾಲೂಕು ಘಟಕಗಳ ಪದಾಧಿಕಾರಿಗಳು, ಸದಸ್ಯರು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಗದಗ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಂದ ಅನುದಾನಿತ ಶಾಲಾ-ಕಾಲೇಜುಗಳ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಡಿ. 17ರಂದು ಮುಂಜಾನೆ ಬೆಳಗಾವಿಯ ಧಾರವಾಡ ನಾಕಾ ಬಳಿ ಸಂಘಟಿತರಾಗಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಅಧ್ಯಕ್ಷ ಬಸವರಾಜ ಎಚ್.ಕೊರ್ಲಹಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ರವಿ ಕೋಟಿ ಅವರ ವಿನಂತಿಸಿದ್ದಾರೆ.



