ಲಕ್ನೋ: ಉತ್ತರ ಪ್ರದೇಶದ ಮೀರತ್‌ನ ಐಐಎಂಟಿ ವಿಶ್ವವಿದ್ಯಾಲಯದ ಮಹಿಳಾ ಹಾಸ್ಟೆಲ್‌ನಲ್ಲಿ ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿನಿಯೊಬ್ಬಳು ಟೆರೇಸ್ ಮೇಲಿಂದ ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಅನು ಗುಪ್ತಾ ಮೃತ ವಿದ್ಯಾರ್ಥಿನಿಯಾಗಿದ್ದು, ಆಕೆ ವಿಶ್ವವಿದ್ಯಾಲಯದ ಸರೋಜಿನಿ ನಾಯ್ಡು ಬಾಲಕಿಯರ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು. ಬುಧವಾರ ರಾತ್ರಿ ಸುಮಾರು 9.30ರ ವೇಳೆಗೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಹಾಸ್ಟೆಲ್ ಕೆಲಸದಾಕೆ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯನ್ನು ಗಮನಿಸಿ ತಕ್ಷಣವೇ ಇತರ ವಿದ್ಯಾರ್ಥಿನಿಯರು ಹಾಗೂ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ.
ಟೆರೇಸ್ ಮೇಲಿಂದ ಬಿದ್ದ ಪರಿಣಾಮ ಅನು ಗುಪ್ತಾ ತಲೆಗೆ ತೀವ್ರ ಗಾಯಗಳಾಗಿದ್ದು, ಮುಖ ಸಂಪೂರ್ಣ ರಕ್ತಮಯ ಸ್ಥಿತಿಯಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಇದು ಆಕಸ್ಮಿಕವಾಗಿ ನಡೆದ ಘಟನೆಯೇ ಅಥವಾ ಆತ್ಮಹತ್ಯೆಯೇ ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.
ಪ್ರಕರಣ ಸಂಬಂಧ ಹಾಸ್ಟೆಲ್ ವಿದ್ಯಾರ್ಥಿನಿಯರು ಹಾಗೂ ವಿಶ್ವವಿದ್ಯಾಲಯ ಸಿಬ್ಬಂದಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಹಾಸ್ಟೆಲ್ ಆವರಣದ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಲಾಗುತ್ತಿದೆ.
ಪ್ರಕರಣದ ತನಿಖೆಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಮೀರತ್ ಗ್ರಾಮೀಣ ವಿಭಾಗದ ಎಸ್ಪಿ ಅಭಿಜಿತ್ ಕುಮಾರ್ ತಿಳಿಸಿದ್ದಾರೆ.



