ಚಿತ್ರದುರ್ಗ: ರಾಜ್ಯ ರಾಜಕೀಯದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) ಅವರು ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 3:15ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕಿಮ್ಸ್ ಆಸ್ಪತ್ರೆಯ ಮೂಲಗಳು ಅಧಿಕೃತವಾಗಿ ತಿಳಿಸಿವೆ.
ಮೊದಲು ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಡಿ. ಸುಧಾಕರ್ ಅವರಿಗೆ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗುತ್ತಿದ್ದ ಕಾರಣ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರಿದಿದ್ದರೂ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.
ಸಚಿವ ಡಿ. ಸುಧಾಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದು, ತಮ್ಮ ಎಕ್ಸ್ ಖಾತೆಯಲ್ಲಿ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ. “ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ. ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ” ಎಂದು ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ತಮ್ಮ ಸಂದೇಶದಲ್ಲಿ, ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದೆ, ಅವರು ಗುಣಮುಖರಾಗುವ ಭರವಸೆ ನನಗಿತ್ತು. ಆದರೆ ವೈದ್ಯರ ನಿರಂತರ ಪ್ರಯತ್ನಗಳ ನಡುವೆಯೂ ಅವರು ನಮ್ಮನ್ನಗಲಿದ್ದಾರೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ.
ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆ ಹೊಂದಿದ್ದ ಸುಧಾಕರ್ ಅವರು ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಕುಟುಂಬ ಮತ್ತು ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ಸಿಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಡಿ. ಸುಧಾಕರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ಡಿ. ಸುಧಾಕರ್ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಸಾರ್ವಜನಿಕರು ಮತ್ತು ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಂತಿಮ ದರ್ಶನದ ಬಳಿಕ, ಡಿ. ಸುಧಾಕರ್ ಅವರ ಅಂತ್ಯ ಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಲು ವ್ಯವಸ್ಥೆ ಮಾಡಲಾಗಿದೆ. ಚಳ್ಳಕೆರೆಯಲ್ಲಿರುವ ಸುಧಾಕರ್ ಶಟಲ್ ಕಾಕ್ ಕೋರ್ಟ್‌ನಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆಗಳು ನಡೆಯುತ್ತಿವೆ.
ಈ ಘಟನೆಯಿಂದ ರಾಜ್ಯ ರಾಜಕೀಯ ವಲಯದಲ್ಲಿ ಶೋಕದ ವಾತಾವರಣ ಆವರಿಸಿದೆ.



