ಬೆಂಗಳೂರು: ನೀಟ್ ಪರೀಕ್ಷೆಯ ಪೇಪರ್ ಲೀಕ್ ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟನೆ ನೀಡಬೇಕು ಎಂದು ರಾಜ್ಯ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಘಟನೆ ದೇಶದ ವಿದ್ಯಾರ್ಥಿಗಳ ಭವಿಷ್ಯಕ್ಕೆ ದೊಡ್ಡ ಹೊಡೆತವಾಗಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಜವಾಬ್ದಾರಿ ವಹಿಸಬೇಕು ಎಂದು ಒತ್ತಾಯಿಸಿದರು.
ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ ಸಚಿವರು, “ವಿದ್ಯಾರ್ಥಿಗಳು ಕಷ್ಟಪಟ್ಟು ಓದುತ್ತಾರೆ. ಆದರೆ ಇಂತಹ ಘಟನೆಗಳು ಅವರ ಪರಿಶ್ರಮವನ್ನು ಹಾಳು ಮಾಡುತ್ತವೆ. ಇದು ಅತ್ಯಂತ ಗಂಭೀರ ವಿಚಾರ” ಎಂದು ಹೇಳಿದರು.
ಎನ್‌ಟಿಎ ಕಾರ್ಯವೈಖರಿಯನ್ನು ಟೀಕಿಸಿದ ಅವರು, ಹಲವು ಬಾರಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಲೋಪಗಳು ನಡೆದಿರುವುದನ್ನು ಉಲ್ಲೇಖಿಸಿ, ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ಅಗತ್ಯವಿದೆ ಎಂದರು. “ಪರೀಕ್ಷೆ ನಡೆಸುವುದಕ್ಕೆ ಸ್ಪಷ್ಟವಾದ ವ್ಯವಸ್ಥೆ ಇರಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರತಿಯೊಂದು ತೀರ್ಮಾನ ಕೈಗೊಳ್ಳಬೇಕು” ಎಂದು ತಿಳಿಸಿದರು.
ಪ್ರಧಾನಿ ಮೋದಿ ಅವರ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮವನ್ನು ಉಲ್ಲೇಖಿಸಿದ ಮಧು ಬಂಗಾರಪ್ಪ, ವಿದ್ಯಾರ್ಥಿಗಳ ಒತ್ತಡದ ಬಗ್ಗೆ ಮಾತನಾಡುವವರು, ಇಂತಹ ಗಂಭೀರ ಅಕ್ರಮಗಳ ಬಗ್ಗೆ ಮೌನವಾಗಿರುವುದು ಸರಿಯಲ್ಲ ಎಂದು ಟೀಕಿಸಿದರು.
“ಮಕ್ಕಳು ದೇಶದ ಭವಿಷ್ಯ. ಪರೀಕ್ಷಾ ವ್ಯವಸ್ಥೆಯನ್ನು ಪಾರದರ್ಶಕವಾಗಿ ನಡೆಸುವುದು ಅತ್ಯಗತ್ಯ. ರಾಜ್ಯ ಸರ್ಕಾರ ಪರೀಕ್ಷೆಗಳನ್ನು ನಡೆಸುವಾಗ ಹಲವು ಹಂತದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುತ್ತದೆ. ಇದೇ ರೀತಿಯ ಜವಾಬ್ದಾರಿತನವನ್ನು ರಾಷ್ಟ್ರೀಯ ಮಟ್ಟದಲ್ಲೂ ತೋರಬೇಕು” ಎಂದು ಹೇಳಿದರು.



