ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಟ್ಟು 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ರೈತರು ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಾರುತಗಳ ಪ್ರಭಾವ ಹೆಚ್ಚಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಉತ್ತರ ಕರ್ನಾಟಕದ ಧಾರವಾಡ, ಹಾವೇರಿ, ಬೆಳಗಾವಿ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯ ವಾತಾವರಣ ಮುಂದುವರಿಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಕೆಲ ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಇದೇ ವೇಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ತಂಪಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸಾರ್ವಜನಿಕರು ಹವಾಮಾನ ಮುನ್ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಮನವಿ ಮಾಡಿದೆ.



