ಬೆಂಗಳೂರು: ರಾಜ್ಯದೆಲ್ಲೆಡೆ 100 ಸ್ಥಳಗಳಲ್ಲಿ ಕಾಂಗ್ರೆಸ್ ಕಚೇರಿ ತೆರೆಯುವ ಸಂಬಂಧ ಕಾನೂನು ಉಲ್ಲಂಘಿಸಿ ಭೂ ಮಂಜೂರು ಮಾಡಲಾಗಿದೆ ಎಂಬ ಆರೋಪದ ಹಿನ್ನೆಲೆ ವಿಧಾನ ಪರಿಷತ್ನಲ್ಲಿ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು.
ಇಂದು ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಈ ವಿಚಾರವನ್ನು ಪ್ರಸ್ತಾಪಿಸಿ, ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕಾಗಿ ಸುಮಾರು 40 ಕೋಟಿ ರೂ. ಮೌಲ್ಯದ ಸರ್ಕಾರಿ ಜಾಗವನ್ನು ಕೇವಲ 2 ಕೋಟಿ ರೂ. ದರದಲ್ಲಿ ಮಂಜೂರು ಮಾಡಿರುವುದು ನಿಜವೇ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕಾಂಗ್ರೆಸ್ ಕಚೇರಿ ತೆರೆಯುವ ಸಂಬಂಧ ನಾಗರಿಕ ಸೌಲಭ್ಯ (ಸಿಎ) ನಿವೇಶನಗಳಲ್ಲಿ ಜಾಗ ಮಂಜೂರು ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು. ಮಾರುಕಟ್ಟೆ ದರಕ್ಕಿಂತ ಮಾರ್ಗಸೂಚಿ ಮೌಲ್ಯದ ಶೇ.5ರಷ್ಟು ಶುಲ್ಕ ವಿಧಿಸಿ ತುಮಕೂರಿನಲ್ಲಿ ಮಾತ್ರ ಭೂ ಮಂಜೂರು ಮಾಡಲಾಗಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ಕಾನೂನು ಉಲ್ಲಂಘನೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯದ 100 ಕಡೆಗಳಲ್ಲಿ ಕಾಂಗ್ರೆಸ್ ಕಚೇರಿ ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿದೆ. ರಾಜಕೀಯ ಪಕ್ಷಗಳಿಗೆ ನಿರ್ದಿಷ್ಟ ಪ್ರಮಾಣದಲ್ಲಿ ಜಾಗ ನೀಡಬಹುದು. ಆದರೆ ಎಲ್ಲ ಕಡೆಗಳಲ್ಲಿ ಮಾರ್ಗಸೂಚಿ ದರದ ಆಧಾರದಲ್ಲಿ ಭೂ ಮಂಜೂರು ಮಾಡುವುದು ಸರಿಯಲ್ಲ. ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾದರೆ ಅಕ್ರಮ ಸಕ್ರಮವಾಗುತ್ತದೆಯೇ? ಸರ್ಕಾರವೇ ನೇರವಾಗಿ ಲೂಟಿ ಹೊಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪ್ರತಿಕ್ರಿಯಿಸಿದ ಸಚಿವ ಬೈರತಿ ಸುರೇಶ್, ರಾಜಕೀಯ ಪಕ್ಷಗಳಿಗೆ ಹಾಗೂ ಸಂಘ-ಸಂಸ್ಥೆಗಳಿಗೆ ಸಿಎ ನಿವೇಶನ ನೀಡುವುದು ಹಿಂದಿನಿಂದಲೂ ನಡೆಯುತ್ತ ಬಂದಿದೆ ಎಂದು ಹೇಳಿದರು. ಬಿಜೆಪಿ ಸದಸ್ಯ ಡಿ.ಎಸ್. ಅರುಣ್ ಅವರೇ ಈ ಹಿಂದೆ ಎರಡು ಸಿಎ ನಿವೇಶನಗಳನ್ನು ಕಡಿಮೆ ದರದಲ್ಲಿ ಪಡೆದಿದ್ದಾರೆ. ಜೊತೆಗೆ ಬಿಜೆಪಿ ಕಚೇರಿಗಳಿಗೆ ಕೂಡ ಕಡಿಮೆ ಬೆಲೆಗೆ ನಿವೇಶನ ನೀಡಲಾಗಿದೆ. 10 ಸಾವಿರ ಚದರ ಅಡಿ ಜಾಗವನ್ನು 500 ರೂಪಾಯಿಗೆ ನೀಡಲಾಗಿದೆ. 2022ರಲ್ಲಿ 100 ಎಕರೆ ಜಾಗವನ್ನು ಕೂಡ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಉಭಯಪಕ್ಷಗಳ ನಡುವೆ ವಾಗ್ವಾದ ಹೆಚ್ಚಾಗುತ್ತಿದ್ದಂತೆ ಮಧ್ಯಪ್ರವೇಶಿಸಿದ ಸಭಾಪತಿ, ಪ್ರಶ್ನೋತ್ತರ ಅವಧಿಯಲ್ಲಿ ಚರ್ಚೆ ನಡೆಸಬೇಡಿ. ಅಗತ್ಯವಿದ್ದರೆ ಅರ್ಧ ಗಂಟೆಯ ವಿಶೇಷ ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.



