ಬೆಂಗಳೂರು: ಪೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ 60 ದಿನಗಳೊಳಗೆ ತನಿಖೆ ಪೂರ್ಣಗೊಳ್ಳದಿದ್ದರೂ ಆರೋಪಿಗೆ ಸ್ವಯಂ (ಡೀಫಾಲ್ಟ್) ಜಾಮೀನು ಸಿಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.
ಬಿಎನ್‌ಎಸ್‌ಎಸ್‌ನ ಸೆಕ್ಷನ್ 193(2) ಅಡಿಯಲ್ಲಿ ಜಾಮೀನು ಕೋರಿ ಗೋವಿಂದ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಈ ಮಹತ್ವದ ಆದೇಶ ನೀಡಿದ್ದಾರೆ.
ಪೋಕ್ಸೊ ಕಾಯ್ದೆಯಂತಹ ವಿಶೇಷ ಕಾನೂನುಗಳು ಸಂತ್ರಸ್ತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ರೂಪುಗೊಂಡಿವೆ. ತ್ವರಿತ ನ್ಯಾಯ ಒದಗಿಸುವುದೇ ಅವುಗಳ ಉದ್ದೇಶವಾಗಿದ್ದು, ಆರೋಪಿಗಳಿಗೆ ಕಾನೂನು ಲೋಪಗಳನ್ನು ಬಳಸಿಕೊಂಡು ತಪ್ಪಿಸಿಕೊಳ್ಳಲು ಅವಕಾಶ ನೀಡುವುದಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆದ್ದರಿಂದ ಬಿಎನ್‌ಎಸ್‌ಎಸ್ ಸೆಕ್ಷನ್ 193(2) ಆಧಾರದ ಮೇಲೆ ಡೀಫಾಲ್ಟ್ ಜಾಮೀನು ಪಡೆಯಲು ಅವಕಾಶವಿಲ್ಲ ಎಂದು ತಿಳಿಸಿದೆ.
ಇದೇ ವೇಳೆ, ಎಫ್‌ಎಸ್‌ಎಲ್ ಅಥವಾ ಸಿಡಿಆರ್ ವರದಿಗಳಿಲ್ಲದೇ ಸಲ್ಲಿಸಲಾದ ಚಾರ್ಜ್‌ಶೀಟ್ ಅಪೂರ್ಣವಾಗಿದೆ ಎಂಬ ಕಾರಣ ಮಾತ್ರದಿಂದ ಆರೋಪಿಗೆ ಜಾಮೀನು ಪಡೆಯುವ ಹಕ್ಕು ಸಿಗುವುದಿಲ್ಲ ಎಂದೂ ನ್ಯಾಯಾಲಯ ಹೇಳಿದೆ.
ಕೋರ್ಟ್ ಗಮನಿಸಿದಂತೆ, 10 ವರ್ಷಗಳವರೆಗೆ ಶಿಕ್ಷೆ ಇರುವ ಅಪರಾಧಗಳಲ್ಲಿ 60 ದಿನ ಹಾಗೂ 10 ವರ್ಷಕ್ಕಿಂತ ಹೆಚ್ಚಿನ ಶಿಕ್ಷೆ ಇರುವ ಪ್ರಕರಣಗಳಲ್ಲಿ 90 ದಿನಗಳೊಳಗೆ ಅಂತಿಮ ವರದಿ ಸಲ್ಲಿಸಬೇಕು. ಗೋವಿಂದನ ಪ್ರಕರಣದಲ್ಲಿ 90 ದಿನಗಳೊಳಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿರುವುದರಿಂದ ಡೀಫಾಲ್ಟ್ ಜಾಮೀನುಗೆ ಅವಕಾಶ ಇಲ್ಲ ಎಂದು ತೀರ್ಪು ನೀಡಿದೆ.
ಈ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಡಿಸೆಂಬರ್ 2025 ಹಾಗೂ ಜನವರಿ 2026ರಲ್ಲಿ ಎರಡು ಬಾರಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದ ಹಿನ್ನೆಲೆಯಲ್ಲಿ ಆರೋಪಿಯು ಹೈಕೋರ್ಟ್ ಮೊರೆ ಹೋಗಿದ್ದ.
ಪ್ರಕರಣದ ಹಿನ್ನೆಲೆ ಪ್ರಕಾರ, ದೂರುದಾರರ ಅಪ್ರಾಪ್ತ ಪುತ್ರಿ ಒಂದು ವರ್ಷ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಳು. ಅದೇ ಆಸ್ಪತ್ರೆಯಲ್ಲಿ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿದ್ದ ಆರೋಪಿಯು ಆಕೆಯೊಂದಿಗೆ ಸಂಬಂಧ ಬೆಳೆಸಿ ದೈಹಿಕ ಸಂಪರ್ಕ ಹೊಂದಿದ್ದಾನೆ ಎಂಬ ಆರೋಪವಿದೆ. ಬಳಿಕ ಅಕ್ಟೋಬರ್ 2025ರಲ್ಲಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಸಮಯದಲ್ಲಿ ಗರ್ಭಿಣಿಯಾಗಿದ್ದಳು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.



