ಮೈಸೂರು: ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಶ್ರೀ ಶಿವರಾತ್ರಿ ಶಿವರಾತ್ರೀಶ್ವರ ಸ್ವಾಮೀಜಿಯ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ. ವೆಂಕಟೇಶ್ ಅವರು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಮಳವಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ರಾಷ್ಟ್ರಪತಿ ಅವರು ಸಂಜೆ 5.20ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ಮರಳಿ, ಎಂಜಿ ರಸ್ತೆಯಲ್ಲಿರುವ ಪ್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಡಿ.17ರಂದು ಬೆಳಗ್ಗೆ 9.30ಕ್ಕೆ ಪ್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಉಪಹಾರ ಮುಗಿಸಿದ ಬಳಿಕ ರಾಷ್ಟ್ರಪತಿ ಅವರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿ ವಿಶೇಷ ವಿಮಾನದ ಮೂಲಕ ಆಂಧ್ರಪ್ರದೇಶದ ತಿರುಪತಿಗೆ ಪ್ರಯಾಣಿಸಲಿದ್ದಾರೆ.



