ಉಡುಪಿ: ಬ್ರಹ್ಮಾವರ ಸಮೀಪ ಖಾಸಗಿ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.
ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಡುಪಿಯಿಂದ ಸಾಗರದತ್ತ ಖಾಸಗಿ ಬಸ್ ತೆರಳುತ್ತಿತ್ತು. ಈ ವೇಳೆ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಬಳಿಕ ಬಸ್‌ನ ಎಲೆಕ್ಟ್ರಿಕಲ್ ಬಾಕ್ಸ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಲು ಆರಂಭಿಸಿದೆ.
ಬೆಂಕಿ ಕಾಣಿಸಿಕೊಂಡ ಕೂಡಲೇ ಬಸ್ ನಿರ್ವಾಹಕ ಸಮಯಪ್ರಜ್ಞೆ ಮೆರೆದು ಬಸ್‌ನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ತಕ್ಷಣವೇ ಬಸ್‌ನಲ್ಲಿದ್ದ ಏಳು ಪ್ರಯಾಣಿಕರನ್ನು ಕೆಳಗಿಳಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ನಂತರ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಕೆಲಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಬಸ್‌ಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಿರ್ವಾಹಕನ ಸಮಯೋಚಿತ ಕ್ರಮದಿಂದ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ. ಹೀಗಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ.
ಬಸ್‌ನ ಎಲೆಕ್ಟ್ರಿಕಲ್ ಬಾಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದರಿಂದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಬೆಂಕಿಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.



