ಬೆಂಗಳೂರು: ಮಾದಪಟ್ಟಣದಲ್ಲಿ ನಡೆದ ಕಲ್ಲು ಕ್ವಾರಿ ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣ ಪರಿಹಾರ ನೀಡಬೇಕು ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅವರು, ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಅತೀವ ನೋವು ತಂದಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ರಾಜ್ಯ ಸರ್ಕಾರವು ನೊಂದ ಕುಟುಂಬಗಳಿಗೆ ತಕ್ಷಣ ಸೂಕ್ತ ಪರಿಹಾರ ನೀಡಬೇಕು ಹಾಗೂ ಅಗತ್ಯ ತುರ್ತು ನೆರವು ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಜೊತೆಗೆ ಕ್ವಾರಿಗಳಲ್ಲಿ ಕಟ್ಟುನಿಟ್ಟಿನ ಸುರಕ್ಷತಾ ನಿಯಮಗಳನ್ನು ಜಾರಿಗೆ ತಂದು ಸಂಬಂಧಿತ ಇಲಾಖೆಗಳು ಕಠಿಣ ನಿಗಾ ವಹಿಸಬೇಕು ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಇಂತಹ ದುರಂತಗಳು ಪದೇ ಪದೇ ಸಂಭವಿಸುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಕ್ವಾರಿ ಮಾಲೀಕರು ಕೂಡ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.



