ಮಂಡ್ಯ: ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಆರೋಪದ ಪ್ರಕರಣದಲ್ಲಿ ಶಾಸಕ ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯಾಗೆ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಈ ಆದೇಶ ನೀಡಿದೆ.
ಪ್ರಕರಣದಲ್ಲಿ ಬಂಧನದ ಭೀತಿ ಎದುರಾಗಿದ್ದ ಹಿನ್ನೆಲೆಯಲ್ಲಿ ಐಶ್ವರ್ಯಾ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ವೇಳೆ, ಮಹಿಳಾ ಪಿಎಸ್‌ಐ ಸವಿತಾ ಪಾಟೀಲ್ ಅವರ ಬಳಿ ಕ್ಷಮೆಯಾಚಿಸಿದರೆ ಜಾಮೀನು ಅರ್ಜಿಯನ್ನು ಪರಿಗಣಿಸುವುದಾಗಿ ನ್ಯಾಯಾಲಯ ತಿಳಿಸಿತ್ತು.
ನ್ಯಾಯಾಲಯದ ಸೂಚನೆಯ ಬಳಿಕ ಐಶ್ವರ್ಯಾ ಅವರು ಪಿಎಸ್‌ಐ ಸವಿತಾ ಪಾಟೀಲ್ ಅವರಿಗೆ ವಿಡಿಯೋ ಮೂಲಕ ಕ್ಷಮೆಯಾಚಿಸಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಉದ್ವೇಗದಿಂದ ಅಹಿತಕರ ಘಟನೆ ನಡೆದಿದೆ ಎಂದು ಅವರು ಹೇಳಿದ್ದು, ತಮ್ಮ ವರ್ತನೆಯಿಂದ ಪಿಎಸ್‌ಐಗೆ ನೋವಾಗಿದ್ದರೆ ಬೇಷರತ್ ಕ್ಷಮೆ ಕೋರುವುದಾಗಿ ತಿಳಿಸಿದ್ದಾರೆ.
ಅಷ್ಟಕ್ಕೂ ಈ ಪ್ರಕರಣ ನಡೆದಿದ್ದು ಹೇಗೆ ಅನ್ನೋದಾದರೆ, ಆಗಸ್ಟ್ 12ರಂದು ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಐಶ್ವರ್ಯಾ ತಮ್ಮ ಇಬ್ಬರು ಮಕ್ಕಳೊಂದಿಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳಿದ್ದರು. ದೇವಾಲಯದ ಗರ್ಭಗುಡಿಗೆ ಪ್ರವೇಶಿಸುವ ವಿಚಾರದಲ್ಲಿ ಕರ್ತವ್ಯದಲ್ಲಿದ್ದ ಪಿಎಸ್‌ಐ ಸವಿತಾ ಪಾಟೀಲ್ ಅವರೊಂದಿಗೆ ಮಾತಿನ ಚಕಮಕಿ ನಡೆದಿತ್ತು ಎಂದು ವರದಿಯಾಗಿದೆ. ಈ ವೇಳೆ ಪಿಎಸ್‌ಐಗೆ ಕಪಾಳಮೋಕ್ಷ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
ಘಟನೆಗೆ ಸಂಬಂಧಿಸಿದಂತೆ ಪಿಎಸ್‌ಐ ಸವಿತಾ ಪಾಟೀಲ್ ನೀಡಿದ ದೂರಿನ ಆಧಾರದ ಮೇಲೆ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಸೇರಿದಂತೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ. ಐಶ್ವರ್ಯಾ ಅವರ ಕಡೆಯಿಂದಲೂ ಪೊಲೀಸ್ ಅಧಿಕಾರಿಯ ವಿರುದ್ಧ ಪ್ರತಿದೂರು ನೀಡಲಾಗಿದೆ ಎಂದು ವರದಿಯಾಗಿದೆ.
ಇದೀಗ ಹೈಕೋರ್ಟ್ ಐಶ್ವರ್ಯಾಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವುದರಿಂದ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆ ಮುಂದುವರಿಯಲಿದೆ.



