ಲಕ್ನೋ: ಪತಿಯಿಂದ ವಿಚ್ಛೇದನ ಪಡೆದ ಬಳಿಕ ಮಾನಸಿಕ ಒತ್ತಡ ಹಾಗೂ ಖಿನ್ನತೆಗೆ ಒಳಗಾಗಿದ್ದ ಮನೋವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ.
ಮೃತರನ್ನು 40 ವರ್ಷದ ಡಾ. ಹೆಮಿಕಾ ಅಗರ್ವಾಲ್ ಎಂದು ಗುರುತಿಸಲಾಗಿದೆ. ರಾಜ್ ನಗರ ಎಕ್ಸ್ಟೆನ್ಷನ್ನಲ್ಲಿರುವ ಆಫೀಸರ್ಸ್ ಸಿಟಿ-2 ಅಪಾರ್ಟ್ಮೆಂಟ್ನ ಐದನೇ ಮಹಡಿಯಿಂದ ಬಿದ್ದು ಅವರು ಮೃತಪಟ್ಟಿದ್ದಾರೆ.
ಘಟನೆ ಭಾನುವಾರ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಡಾ. ಹೆಮಿಕಾ ಅವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಕುಟುಂಬದವರ ಮಾಹಿತಿ ಪ್ರಕಾರ, ಸುಮಾರು ಒಂದೂವರೆ ವರ್ಷದ ಹಿಂದೆ ಡಾ. ಹೆಮಿಕಾ ಅವರಿಗೆ ವಿಚ್ಛೇದನವಾಗಿತ್ತು. ಬಳಿಕ ಅವರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಅವರ ತಂದೆ ಖ್ಯಾತ ಮನೋವೈದ್ಯ ಡಾ. ಆರ್. ಚಂದ್ರ ಅವರು, ಮಗಳು ಕಳೆದ ಕೆಲವು ತಿಂಗಳುಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿಸಿದ್ದಾರೆ.
ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಟುಂಬ ಸದಸ್ಯರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿದಿದೆ.
ಇದುವರೆಗೆ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿರುವ ಬಗ್ಗೆ ಪೊಲೀಸರು ಅಧಿಕೃತ ಮಾಹಿತಿ ನೀಡಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.



