ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: “ಮಲೇರಿಯಾ ಅಂತ್ಯಗೊಳಿಸಲು ಸಕಲರೂ ಸಂಕಲ್ಪ ಮಾಡೋಣ, ನಮಗಿದು ಸಾಧ್ಯವಿದೆ, ನಾವು ಇದನ್ನು ಮಾಡಲೇಬೇಕು” ಎಂಬ ಘೋಷವಾಕ್ಯದೊಂದಿಗೆ ಮಲೇರಿಯಾ ನಿರ್ಮೂಲನೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸಹದೇವಪ್ಪ ಹನಕನಹಳ್ಳಿ ಹೇಳಿದರು.
ಶಿಗ್ಲಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಲೇರಿಯಾ ಪರಾವಲಂಬಿ ಜೀವಿಗಳಿಂದ ಉಂಟಾಗುವ ಸಾಂಕ್ರಾಮಿಕ ರೋಗವಾಗಿದ್ದು, ಹೆಣ್ಣು ಅನೋಫಿಲೀಸ್ ಸೊಳ್ಳೆಯ ಕಡಿತದಿಂದ ಹರಡುತ್ತದೆ. ಸೋಂಕಿನ ಲಕ್ಷಣಗಳು ಸಾಮಾನ್ಯವಾಗಿ 7ರಿಂದ 14 ದಿನಗಳೊಳಗೆ ಕಾಣಿಸಿಕೊಳ್ಳುತ್ತವೆ. ಚಳಿ, ತೀವ್ರ ಜ್ವರ ಹಾಗೂ ಬೆವರುವುದು ಪ್ರಮುಖ ಲಕ್ಷಣಗಳಾಗಿದ್ದು, ಯಾವುದೇ ರೀತಿಯ ಜ್ವರ ಕಂಡುಬಂದರೂ ತಕ್ಷಣ ರಕ್ತ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.
ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡುವುದು, ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸೊಳ್ಳೆ ಪರದೆ ಹಾಗೂ ಸೊಳ್ಳೆ ನಿವಾರಕ ಕ್ರಮಗಳನ್ನು ಅನುಸರಿಸುವುದರಿಂದ ಮಲೇರಿಯಾ ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಫ್.ಸಿ. ಹೊಸಮಠ ಮಾತನಾಡಿ, ಆರೋಗ್ಯ ಇಲಾಖೆಯ ಜಾಗೃತಿ ಕಾರ್ಯಕ್ರಮಗಳು ಸಾರ್ವಜನಿಕರಲ್ಲಿ ಆರೋಗ್ಯ ಅರಿವು ಮೂಡಿಸುವುದರ ಜೊತೆಗೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೂ ಸಹಕಾರಿಯಾಗುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
“ಮಲೇರಿಯಾ ನಿರ್ಮೂಲನೆ ಕೇವಲ ಆರೋಗ್ಯ ಇಲಾಖೆಯ ಜವಾಬ್ದಾರಿ ಅಲ್ಲ. ಪ್ರತಿಯೊಬ್ಬ ನಾಗರಿಕರೂ ಸ್ವಚ್ಛತೆ ಕಾಪಾಡಿ ಸೊಳ್ಳೆ ನಿಯಂತ್ರಣ ಕ್ರಮಗಳನ್ನು ಪಾಲಿಸಿದರೆ ಮಾತ್ರ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಬಹುದು.”
ಸಹದೇವಪ್ಪ ಹನಕನಹಳ್ಳಿ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ



