ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಸೂಚಿಸಿದೆ. ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಭಾಗದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಮೀನುಗಾರರು ಮತ್ತು ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.



