ವಿಜಯಪುರ: ಭಾರೀ ಗಾಳಿ ಸಹಿತ ಸುರಿದ ಮಳೆಗೆ ಮನೆ ಮೇಲ್ಚಾವಣಿ ಕುಸಿದು ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಜೀವಂತ ಸಮಾಧಿಯಾಗಿರುವ ಹೃದಯವಿದ್ರಾವಕ ಘಟನೆ ವಿಜಯಪುರ ಜಿಲ್ಲೆಯ ಮೊರಟಗಿ ಗ್ರಾಮದಲ್ಲಿ ನಡೆದಿದೆ.
ಆಲಮೇಲ ತಾಲೂಕಿನ ಮೊರಟಗಿ ಗ್ರಾಮದಲ್ಲಿ ನಡೆದ ಈ ದುರಂತದಲ್ಲಿ ಗುರುನಾಥ ಬಡಿಗೇರ (35), ಪತ್ನಿ ಜ್ಯೋತಿ ಬಡಿಗೇರ (28), ಮಕ್ಕಳಾದ ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಮೃತಪಟ್ಟ ದುರ್ದೈವಿಗಳು.
ತಮ್ಮ ಮನೆಯ ದುರಸ್ಥಿ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕುಟುಂಬವು ಹಳೆಯ ಮನೆಯಲ್ಲಿ ಬಾಡಿಗೆಗೆ ವಾಸವಾಗಿತ್ತು. ಆದರೆ ನಿನ್ನೆ ರಾತ್ರಿ ಸುರಿದ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಮನೆಯ ಮೇಲ್ಚಾವಣಿ ಏಕಾಏಕಿ ಕುಸಿದು ಬಿದ್ದ ಪರಿಣಾಮ ನಾಲ್ವರೂ ಅವಶೇಷಗಳಡಿ ಸಿಲುಕಿ ಜೀವಂತ ಸಮಾಧಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯ ನಡೆಸಿದರು. ಅವಶೇಷಗಳಡಿ ಸಿಲುಕಿದ್ದ ನಾಲ್ವರ ಶವಗಳನ್ನು ಹೊರತೆಗೆದಿದ್ದಾರೆ.
ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ. ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದುರಂತದಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮನಕಲುಕುವಂತಿತ್ತು.



