ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡುವಂತೆ ಪುತ್ತೂರು ಉಪ ವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಹೊರಡಿಸಿದ್ದ ಗಡಿಪಾರು ಆದೇಶವನ್ನು ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಈ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರ ಪೀಠ, ಗಡಿಪಾರು ಅಗತ್ಯವಿದ್ದರೆ ಕಾನೂನುಬದ್ಧವಾಗಿ ಮರುಪರಿಶೀಲನೆ ನಡೆಸಿ ಹೊಸ ಆದೇಶ ಹೊರಡಿಸುವಂತೆ ಪುತ್ತೂರು ಸಹಾಯಕ ಆಯುಕ್ತರಿಗೆ ಸೂಚನೆ ನೀಡಿತ್ತು.
ಹೈಕೋರ್ಟ್ ಆದೇಶದಂತೆ ಮರುಪರಿಶೀಲನೆ ನಡೆಸಿದ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಡಿಸೆಂಬರ್ 17ರಂದು ಒಂದು ವರ್ಷ ಕಾಲ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣಗಳು ದಾಖಲಾಗಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ಗಡಿಪಾರು ಆದೇಶದ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದಿದ್ದು, ಇಂದು ಬೆಳಗ್ಗೆ ಪೊಲೀಸರು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ತೆರಳಿದ್ದಾರೆ. ಈ ವೇಳೆ ಅವರು ಮನೆಯಲ್ಲಿ ಇಲ್ಲದ ಕಾರಣ, ಪೊಲೀಸರು ಮನೆಗೆ ನೋಟಿಸ್ ಅಂಟಿಸಿ ವಾಪಸ್ಸಾಗಿದ್ದಾರೆ.



