ದೊಡ್ಡಬಳ್ಳಾಪುರ: ಪೊಲೀಸರಿಗೆ ಬೇಕಾಗಿದ್ದ ರೌಡಿ ಶೀಟರ್ ಸೋಮಶೇಖರ ಅಲಿಯಾಸ್ ಡೆಡ್ಲಿ ಸೋಮನನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಸೋಮ, ಇದೇ ವೇಳೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಕಾಲೇಜುಗಳ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದ್ದು, ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ಸೋಮನನ್ನು ಬಂಧಿಸಲಾಗಿದೆ.
ಬಂಧಿತ ರೌಡಿ ಶೀಟರ್‌ನಿಂದ ಸುಮಾರು 2 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ ಸುಮಾರು 1 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.
ನಾಲ್ಕು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ ಸೋಮ, ಗಾಂಜಾ ಮಾರಾಟದ ಮೂಲಕ ತನ್ನ ಚಟುವಟಿಕೆ ಮುಂದುವರಿಸಿದ್ದ ಎನ್ನಲಾಗಿದೆ. ಇದೀಗ ಬಂಧನದ ಬಳಿಕ ಆತನ ಅಕ್ರಮ ಚಟುವಟಿಕೆಗಳು, ಗಾಂಜಾ ಪೂರೈಕೆ ಮಾಡುತ್ತಿದ್ದ ಮೂಲ ಹಾಗೂ ಮಾರಾಟ ಜಾಲದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



