ಮಂಡ್ಯ: ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಜುಲೈ ತಿಂಗಳು ಕಳೆಯುತ್ತಾ ಬಂದರೂ ನಿರೀಕ್ಷಿತ ಮಳೆಯಾಗದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಾದ್ಯಂತ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿವೆ. ಹಚ್ಚಹಸಿರಿನಿಂದ ಕಂಗೊಳಿಸಬೇಕಿದ್ದ ಜಮೀನುಗಳು ಇದೀಗ ಒಣಭೂಮಿಯಾಗಿ ಮಾರ್ಪಟ್ಟಿವೆ.
ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಶೇ.83ರಷ್ಟು ಮಳೆ ಕೊರತೆ ಎದುರಾಗಿದೆ. ಮಳೆಯ ಅಭಾವದಿಂದ ಜಮೀನುಗಳಲ್ಲಿ ತೇವಾಂಶ ಇಲ್ಲದಂತಾಗಿದ್ದು, ಉಳುಮೆ ಮತ್ತು ಬಿತ್ತನೆ ಕಾರ್ಯಗಳು ಸ್ಥಗಿತಗೊಂಡಿವೆ. ಕಾವೇರಿ ನದಿ ಹಾಗೂ ಕೃಷಿ ನೀರಿನ ಮೇಲೆ ಅವಲಂಬಿತವಾಗಿರುವ ರೈತರು ಮಳೆಗಾಗಿ ಆಗಸದತ್ತ ನೋಡುವಂತಾಗಿದೆ.
ಇತ್ತ ಜಿಲ್ಲೆಯ ಜೀವನಾಡಿಯಾಗಿರುವ ಕೆಆರ್ಎಸ್ ಜಲಾಶಯದಲ್ಲೂ ನೀರಿನ ಮಟ್ಟ ಕುಸಿದಿದೆ. ಸದ್ಯ ಜಲಾಶಯದಲ್ಲಿ ಸುಮಾರು 92 ಅಡಿ ನೀರಿದ್ದು, ಬಳಕೆಗೆ ಲಭ್ಯವಿರುವುದು ಕೇವಲ 12 ಟಿಎಂಸಿ ನೀರು ಮಾತ್ರ ಎಂದು ತಿಳಿಸಲಾಗಿದೆ. ಹೀಗಾಗಿ ಕುಡಿಯುವ ನೀರಿಗೆ ಆದ್ಯತೆ ನೀಡಲಾಗಿದ್ದು, ಕೃಷಿ ಉದ್ದೇಶಕ್ಕೆ ನೀರು ಹರಿಸುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಇದರ ಪರಿಣಾಮ ಕಾಲುವೆ ನೀರಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಭಾರಿ ಹೊಡೆತ ಬಿದ್ದಿದೆ. ಜಿಲ್ಲೆಯಲ್ಲಿ ಈ ಬಾರಿ 2.06 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಗುರಿ ಹೊಂದಲಾಗಿತ್ತು. ಆದರೆ ಇದುವರೆಗೆ ಕೇವಲ 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದಿದ್ದು, ಶೇ.9ರಷ್ಟು ಪ್ರಗತಿ ಮಾತ್ರ ದಾಖಲಾಗಿದೆ.
ಮಂಡ್ಯ ಜಿಲ್ಲೆಯ ಏಳು ತಾಲೂಕುಗಳಲ್ಲೂ ಬರದ ವಾತಾವರಣ ನಿರ್ಮಾಣವಾಗಿದೆ. ಮಳೆ ಹಾಗೂ ನೀರಿನ ಕೊರತೆಯಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ರೈತರು ಒತ್ತಾಯಿಸಿದ್ದಾರೆ.



