ನವದೆಹಲಿ: ಟರ್ಕಿಯ ಕಹ್ರಮನ್‌ಮರಾಸ್ ಪ್ರಾಂತ್ಯದ ಆಯ್ಸರ್ ಕ್ಯಾಲಿಕ್ ಮಾಧ್ಯಮಿಕ ಶಾಲೆಯಲ್ಲಿ ನಡೆದ ಭೀಕರ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಸುಮಾರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮಾಹಿತಿಯ ಪ್ರಕಾರ, ಶಸ್ತ್ರಸಜ್ಜಿತ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ಗನ್ ಅನ್ನು ಬ್ಯಾಗ್‌ನಲ್ಲಿ ಶಾಲೆಗೆ ತಂದು ಗುಂಡು ಹಾರಿಸಿದ್ದಾನೆ. ಈ ದಾಳಿಯಲ್ಲಿ ಒಬ್ಬ ಶಿಕ್ಷಕ ಹಾಗೂ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ದಾಳಿಯ ಬಳಿಕ ಆರೋಪಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಬಳಿಕ ಸ್ಥಳಕ್ಕೆ ಭದ್ರತಾ ಪಡೆಗಳು ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.



