ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ಮಟ್ಟಿಹಾಳ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಗುಂಡಿನ ದಾಳಿಗೆ ತಿರುಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಮಟ್ಟಿಹಾಳ ಗ್ರಾಮದ ಪೆಟ್ರೋಲ್ ಬಂಕ್‌ನಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ಸುಖದೇವ್ ಹಾಗೂ ರಾಜು ಎಂದು ಗುರುತಿಸಲಾಗಿದೆ.
ಸುಖದೇವ್ ಅವರು ಸ್ನೇಹಿತ ರಾಜು ಜೊತೆ ಪೆಟ್ರೋಲ್ ಬಂಕ್‌ಗೆ ತೆರಳಿದ್ದ ವೇಳೆ ಬಂಕ್ ಮಾಲೀಕ ಸಂಗಪ್ಪ ಪೂಜಾರಿ ಅವರೊಂದಿಗೆ ಜಗಳ ನಡೆದಿದೆ ಎನ್ನಲಾಗಿದೆ. ಬಳಿಕ ಸಂಗಪ್ಪ ಮನೆಗೆ ತೆರಳಿ ಪರವಾನಗಿ ಹೊಂದಿದ್ದ ಪಿಸ್ತೂಲ್ ತಂದು ಇಬ್ಬರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ.
ಗುಂಡಿನ ದಾಳಿಯಲ್ಲಿ ಸುಖದೇವ್ ಅವರ ಹೊಟ್ಟೆ ಮತ್ತು ಬೆನ್ನಿಗೆ ಗುಂಡುಗಳು ತಗುಲಿದ್ದು, ರಾಜು ಅವರಿಗೂ ಗಾಯಗಳಾಗಿವೆ. ಇಬ್ಬರನ್ನೂ ವಿಜಯಪುರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಬಳಿಕ ಕೊಲ್ಹಾರ ಪೊಲೀಸರು ಸಂಗಪ್ಪ ಪೂಜಾರಿಯನ್ನು ವಶಕ್ಕೆ ಪಡೆದಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



