ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಶಾಲಾ ಸಮಯಕ್ಕೆ ಸಮರ್ಪಕ ಬಸ್ ಸೌಲಭ್ಯ ಇಲ್ಲದೆ ತೊಂದರೆ ಅನುಭವಿಸುತ್ತಿರುವ ವಿದ್ಯಾರ್ಥಿಗಳು, ಪಾಲಕರು ಹಾಗೂ ಕೂಲಿ ಕಾರ್ಮಿಕರು ಶುಕ್ರವಾರ ಲಕ್ಕುಂಡಿ ಬಸ್ ನಿಲ್ದಾಣದಲ್ಲಿ ಬಸ್ಗಳನ್ನು ತಡೆದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿರುದ್ಧ ಧಿಡೀರ್ ಪ್ರತಿಭಟನೆ ನಡೆಸಿದರು.
ಕಳೆದ ಒಂದು ತಿಂಗಳಿಂದ ಬೆಳಗ್ಗೆ ಶಾಲಾ–ಕಾಲೇಜು ಸಮಯಕ್ಕೆ ಸಮರ್ಪಕ ಬಸ್ಗಳು ಸಂಚರಿಸದ ಪರಿಣಾಮ ವಿದ್ಯಾರ್ಥಿಗಳು ಗಂಟೆಗಟ್ಟಲೆ ಬಸ್ಗಾಗಿ ಕಾಯುವಂತಾಗಿದೆ. ಇದರಿಂದ ಸಮಯಕ್ಕೆ ಶಾಲೆಗೆ ತೆರಳಲು ಸಾಧ್ಯವಾಗದೆ ಶಿಕ್ಷಕರು ತರಗತಿಯಿಂದ ಹೊರಗೆ ನಿಲ್ಲಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.
ಪ್ರತಿಭಟನಾಕಾರರು ಬಸ್ ನಿಲ್ದಾಣದಲ್ಲಿ 10ಕ್ಕೂ ಹೆಚ್ಚು ಬಸ್ಗಳನ್ನು ತಡೆದು ಸಾರಿಗೆ ಸಂಸ್ಥೆ ವಿರುದ್ಧ ಘೋಷಣೆ ಕೂಗಿದರು. ಎರಡು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಗದಗ, ಹುಬ್ಬಳ್ಳಿ, ಕೊಪ್ಪಳ, ವಿಜಯನಗರ, ರಾಯಚೂರು, ಬೆಳಗಾವಿ, ಹಾವೇರಿ ಹಾಗೂ ಬಳ್ಳಾರಿ ಕಡೆಗೆ ತೆರಳುವ ಪ್ರಯಾಣಿಕರು ಪರದಾಡಿದರು.
ಬೆಳಗ್ಗೆ 8ರಿಂದ 10ರವರೆಗೆ ಗದಗ ಹಾಗೂ ಹುಬ್ಬಳ್ಳಿಗೆ ಶಾಲಾ–ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುತ್ತದೆ. ಈ ಅವಧಿಯಲ್ಲಿ ಬಸ್ ಕೊರತೆಯಿಂದ ವಿದ್ಯಾರ್ಥಿಗಳು ನೂಕುನುಗ್ಗಲಿನ ನಡುವೆ ಸಂಚರಿಸುವಂತಾಗಿದೆ. ಈ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸ್ಥಳಕ್ಕೆ ಆಗಮಿಸಿದ ಗದಗ ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿಯನ್ನು ವಿದ್ಯಾರ್ಥಿಗಳು ಹಾಗೂ ಪಾಲಕರು ತರಾಟೆಗೆ ತೆಗೆದುಕೊಂಡರು. ಸಮಸ್ಯೆ ಬಗೆಹರಿಸದಿದ್ದರೆ ಸಾರಿಗೆ ಸಚಿವರು ಹಾಗೂ ಮುಖ್ಯಮಂತ್ರಿಗೆ ದೂರು ನೀಡುವುದಾಗಿ ಎಚ್ಚರಿಸಿದರು.
ಮುಂದಿನ ನಾಲ್ಕೈದು ದಿನಗಳಲ್ಲಿ ವಿದ್ಯಾರ್ಥಿಗಳ ಶಾಲಾ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ವಿಭಾಗೀಯ ವ್ಯವಸ್ಥಾಪಕರೊಂದಿಗೆ ಚರ್ಚಿಸುವುದಾಗಿ ಬಸ್ ನಿಲ್ದಾಣದ ಮೇಲ್ವಿಚಾರಕ ತಿಮ್ಮನಗೌಡ ಭರವಸೆ ನೀಡಿದರು. ಬೈಪಾಸ್ನಲ್ಲಿ ಸಂಚರಿಸುವ ಬಸ್ಗಳನ್ನು ಲಕ್ಕುಂಡಿ ನಿಲ್ದಾಣಕ್ಕೆ ಬರುವಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.
ಎಂಟು ತಿಂಗಳ ಹಿಂದೆ ಇದೇ ಸಮಸ್ಯೆ ಕುರಿತು ಪ್ರತಿಭಟನೆ ನಡೆಸಿದಾಗ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದರು. ಒಂದು ವಾರ ಮಾತ್ರ ಬಸ್ ಓಡಿಸಿ ಮತ್ತೆ ಸ್ಥಗಿತಗೊಳಿಸಲಾಗಿದೆ. ಒಂದು ವಾರದೊಳಗೆ ಸಮಸ್ಯೆ ಬಗೆಹರಿಸದಿದ್ದರೆ ವಿದ್ಯಾರ್ಥಿಗಳೊಂದಿಗೆ ತೀವ್ರ ಪ್ರತಿಭಟನೆ ನಡೆಸಲಾಗುವುದು.”
— ಬಸವರಾಜ ಮುಳ್ಳಾಳ, ಬಸನಗೌಡ ಬಿರಾದಾರ, ವೀರೇಶ ಮುಸ್ಕಿನಭಾವಿ, ಪಾಲಕರು
ಪೊಲೀಸರ ವಿರುದ್ಧವೂ ಆಕ್ರೋಶ
ಪ್ರತಿಭಟನೆ ವೇಳೆ ಪೊಲೀಸರು ವಿದ್ಯಾರ್ಥಿಗಳಿಗೆ ಅವಾಚ್ಯ ಶಬ್ದ ಬಳಸಿದ್ದಾರೆ ಎಂದು ಆರೋಪಿಸಿ ಪಾಲಕರು ಹಾಗೂ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಕೆಲಕಾಲ ವಾಗ್ವಾದ, ಗದ್ದಲದ ವಾತಾವರಣ ನಿರ್ಮಾಣವಾಯಿತು.



