ಬೆಂಗಳೂರು: ರಾಜ್ಯದಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣ ಬಳಕೆಯ ಬಗ್ಗೆ ಆತಂಕ ವ್ಯಕ್ತಪಡಿಸಿರುವ ರಾಜ್ಯ ಸರ್ಕಾರ, ತನ್ನ ಬಜೆಟ್‌ನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ಮತ್ತು ಮೊಬೈಲ್ ಬಳಕೆಗೆ ನಿರ್ಬಂಧ ವಿಧಿಸುವ ನಿರ್ಧಾರ ಕೈಗೊಂಡಿದೆ. ಈ ಕ್ರಮವನ್ನು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸ್ವಾಗತಿಸಿದ್ದಾರೆ.
ಬೆಂಗಳೂರಿನ ಕೆಂಗಲ್ ಗೇಟ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳ ಆರೋಗ್ಯ ಮತ್ತು ಮಾನಸಿಕ ಬೆಳವಣಿಗೆಗೆ ಈ ನಿರ್ಧಾರ ಸಹಾಯಕವಾಗುತ್ತದೆ ಎಂದು ಹೇಳಿದರು.
ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ವ್ಯಸನವು ಸಮಾಜದಲ್ಲಿ ಗಂಭೀರ ಸಮಸ್ಯೆಯಾಗಿ ಪರಿಣಮಿಸುತ್ತಿದೆ. “ಇಂದು ಮಕ್ಕಳಷ್ಟೇ ಅಲ್ಲ, ದೊಡ್ಡವರೂ ಸಹ ದಿನಕ್ಕೆ ಏಳು-ಎಂಟು ಗಂಟೆಗಳಷ್ಟು ಸ್ಕ್ರೀನ್ ಟೈಮ್ ಬಳಸುತ್ತಿದ್ದಾರೆ. ನಮ್ಮ ಸ್ಕ್ರೀನ್ ಟೈಮ್ ಕೂಡ ಏಳೆಂಟು ಗಂಟೆ ಆಗುತ್ತಿದೆ. ಇದು ಒಳ್ಳೆಯ ಪ್ರವೃತ್ತಿಯಲ್ಲ,” ಎಂದು ಹೇಳಿದರು.
ಆದ್ದರಿಂದ ಮೊಬೈಲ್ ಬಳಕೆಗೆ ಕಡ್ಡಾಯವಾಗಿ ನಿಯಮಿತ ಮಿತಿಯನ್ನು ಇರಿಸಿಕೊಳ್ಳಬೇಕು. ಮಕ್ಕಳಿಗೆ ಮಾತ್ರವಲ್ಲದೆ ಎಲ್ಲರೂ ತಮ್ಮ ಮೊಬೈಲ್ ಬಳಕೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಅಗತ್ಯ ಎಂದು ಸಚಿವ ಸಂತೋಷ್ ಲಾಡ್ ಸಲಹೆ ನೀಡಿದರು.



