ವಿಜಯಸಾಕ್ಷಿ ಸುದ್ದಿ, ಗದಗ: ಚುನಾವಣಾ ಪ್ರಣಾಳಿಕೆಯಲ್ಲಿ ಸ್ಲಂ ನಿವಾಸಿಗಳು ಹಾಗೂ ಬಡಜನರಿಗೆ ನೀಡಿರುವ ಭರವಸೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ಸ್ಲಂ ಜನಾಂದೋಲನ-ಕರ್ನಾಟಕ ವತಿಯಿಂದ ಜೂನ್ 20ರಂದು ಗದಗ ನಗರದಲ್ಲಿ ರಾಜ್ಯ ಪ್ರತಿನಿಧಿಗಳ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ತಿಳಿಸಿದ್ದಾರೆ.
ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದರೂ ಸ್ಲಂ ನಿವಾಸಿಗಳಿಗೆ ನೀಡಿದ್ದ ಹಲವು ಭರವಸೆಗಳು ಇನ್ನೂ ಈಡೇರಿಲ್ಲ ಎಂದು ಆರೋಪಿಸಿದರು.
ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ, ಉಚಿತ ಮನೆಗಳ ನಿರ್ಮಾಣ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಸರ್ಕಾರ ನಿರೀಕ್ಷಿತ ಮಟ್ಟದಲ್ಲಿ ಕಾರ್ಯನಿರ್ವಹಿಸಿಲ್ಲ. ಬಡಜನರ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯದ ವಿಚಾರದಲ್ಲಿ ಸರ್ಕಾರ ತನ್ನ ವಾಗ್ದಾನಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.
ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಆರ್. ಮಾನ್ವಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಪರಿಷ್ಕರಣೆ ಹೆಸರಿನಲ್ಲಿ ಅರ್ಹ ಫಲಾನುಭವಿಗಳನ್ನು ಯೋಜನೆಯಿಂದ ಹೊರಗಿಡುವ ಪ್ರಯತ್ನ ನಡೆಯುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದರು.
ಜೂನ್ 20ರಂದು ನಗರದ ಲಾಯನ್ಸ್ ಭವನದಲ್ಲಿ ನಡೆಯಲಿರುವ ರಾಜ್ಯ ಪ್ರತಿನಿಧಿಗಳ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ 9.30ಕ್ಕೆ ನಗರಸಭೆ ಆವರಣದಿಂದ ರ‍್ಯಾಲಿ ಆರಂಭವಾಗಲಿದ್ದು, ಸಾಮಾಜಿಕ ಹೋರಾಟಗಾರ ಹಾಗೂ ಚಲನಚಿತ್ರ ನಟ ಅಹಿಂಸಾ ಚೇತನ ಚಾಲನೆ ನೀಡಲಿದ್ದಾರೆ.
ಗುರು ಬಸವೇಶ್ವರ ಮಠದ ಡಾ. ಪ್ರಭು ಮಹಾಂತ ಮಹಾಸ್ವಾಮೀಜಿ ಸಮ್ಮೇಳನ ಉದ್ಘಾಟಿಸಲಿದ್ದು, ಸಾವಿತ್ರಿಬಾಯಿ ಫುಲೆ ಮಹಿಳಾ ಸಮಿತಿಯ ರಾಜ್ಯ ಸಂಚಾಲಕಿ ಚಂದ್ರಮ್ಮ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಸಾಮಾಜಿಕ ಹೋರಾಟಗಾರರು, ಪ್ರಗತಿಪರ ಚಿಂತಕರು ಹಾಗೂ ರಾಜ್ಯದ ಜಿಲ್ಲಾ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವೆಂಕಮ್ಮ, ವೆಂಗಮ್ಮ, ಪರವೀನಬಾನು ಹವಾಲ್ದಾರ, ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಶರಣಪ್ಪ ಸೂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಚುನಾವಣಾ ಪ್ರಣಾಳಿಕೆಯಲ್ಲಿ ಸ್ಲಂ ನಿವಾಸಿಗಳಿಗೆ ನೀಡಿದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು. ಬಡಜನರ ಹಕ್ಕುಗಳ ರಕ್ಷಣೆಗಾಗಿ ರಾಜ್ಯ ಮಟ್ಟದಲ್ಲಿ ಹೋರಾಟ ಮುಂದುವರಿಯಲಿದೆ.”
ಎ. ನರಸಿಂಹಮೂರ್ತಿ, ರಾಜ್ಯ ಸಂಚಾಲಕ, ಸ್ಲಂ ಜನಾಂದೋಲನ-ಕರ್ನಾಟಕ



