ವಿಜಯಸಾಕ್ಷಿ ಸುದ್ದಿ, ಗದಗ: ದುಶ್ಚಟಗಳು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ದುರ್ಬಲಗೊಳಿಸುತ್ತವೆ. ಉತ್ತಮ ಆರೋಗ್ಯ, ಶಿಸ್ತು ಮತ್ತು ನಿರಂತರ ಅಧ್ಯಯನದೊಂದಿಗೆ ಉತ್ತಮ ಸಂಸ್ಕಾರ ಬೆಳೆಸಿಕೊಂಡರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ಬಸವರಾಜ ದಂಡಿನ ಹೇಳಿದರು.
ನಗರದ ಸಂಕೇತ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ವತಿಯಿಂದ ಆಯೋಜಿಸಿದ್ದ ‘ಸ್ವಾಸ್ಥ ಸಂಕಲ್ಪ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಉತ್ತಮರ ಸಹವಾಸದಿಂದ ಉತ್ತಮ ವಿಚಾರಗಳು ಮೂಡುತ್ತವೆ. ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ, ಹಿರಿಯರ ಮಾರ್ಗದರ್ಶನದಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಗದಗ ತಾಲೂಕು ಮದ್ಯವರ್ಜನ ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷ ಶ್ರೀನಿವಾಸ ಹುಯಿಲಗೋಳ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಉತ್ತಮ ಜೀವನ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದ ಅಂಗವಾಗಿ ನಡೆದ ವೆಬಿನಾರ್‌ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಉತ್ತಮ ಜೀವನಶೈಲಿ, ಆರೋಗ್ಯ ಹಾಗೂ ಮೌಲ್ಯಯುತ ಬದುಕಿನ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಮಾರುತಿ ಪೂಜಾರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಲಕ್ಷ್ಮಿ ಪಾವಸ್ಕಾರ್, ಸೇವಾ ಪ್ರತಿನಿಧಿಗಳಾದ ಸುಜಾತಾ ಪಾಟೀಲ, ಲಕ್ಷ್ಮಿ ಅರಮನಿ, ಜ್ಯೋತಿ ಗೌಡರ ಸೇರಿದಂತೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
“ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಉತ್ತಮ ಆರೋಗ್ಯ ಮತ್ತು ದುಶ್ಚಟಗಳಿಂದ ದೂರವಿರುವ ಮನೋಭಾವವೇ ಯಶಸ್ಸಿನ ಭದ್ರ ಬುನಾದಿ.”
– ಬಸವರಾಜ ದಂಡಿನ, ಹಿರಿಯ ಪತ್ರಕರ್ತ



