ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರಕ್ಕೆ ನಿರಂತರ ನೀರು ಪೂರೈಕೆ ಯೋಜನೆ 2017ರಲ್ಲಿಯೇ ಲೋಕಾರ್ಪಣೆಗೊಂಡಿದೆ. ಆದರೂ ಸರಿಯಾಗಿ ವಾರ್ಡ್ವಾರು ನಿರಂತರ ನೀರು ಪೂರೈಕೆ ಸಾಧ್ಯವಾಗಿಲ್ಲ. ಈ ಬಗ್ಗೆ ನಗರಸಭೆ ಅಧಿಕಾರಿಗಳು ಗಂಭೀರ ಕ್ರಮ ಕೈಗೊಳ್ಳಬೇಕೆಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ (ದಿಶಾ) ಸಮಿತಿ ಸಭೆ ಹಾಗೂ ವಿವಿಧ ಇಲಾಖೆಗಳ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅವಳಿ ನಗರಕ್ಕೆ ನೀರು ಪೂರೈಕೆ ಕುರಿತಂತೆ ಶಾಸಕ ಸಿ.ಸಿ. ಪಾಟೀಲ ಹಾಗೂ ವಿ.ಪ ಸದಸ್ಯ ಎಸ್.ವಿ. ಸಂಕನೂರ ಅವರುಗಳೂ ಸಹ ಅಸಮರ್ಪಕ ನೀರು ಪೂರೈಕೆಯನ್ನು ಸರಿಪಡಿಸುವಂತೆ ಸಭೆಯಲ್ಲಿ ಸುದೀರ್ಫವಾಗಿ ಚರ್ಚಿಸಿದರು. ಹಿಂದಿನ ಸಭೆಯಲ್ಲಿ ಸೂಚಿಸಿದ ಕಾರ್ಯಗಳನ್ನು ಸರಿಯಾಗಿ ಅನುಷ್ಠಾನಗೊಳಿಸಿ ವಿಶಿಷ್ಟ ಸಾಧನೆಯೊಂದಿಗೆ ಅಧಿಕಾರಿಗಳು ಸಭೆಗೆ ಆಗಮಿಸಬೇಕು. ಪ್ರತಿ ಸಭೆಯಲ್ಲಿ ನೀಡಿರುವ ಸೂಚನೆಗಳ ಪಾಲನೆ ಮಾಡಿ ಗದಗ ಜಿಲ್ಲೆ ಆರ್ಥಿಕ ಪ್ರಗತಿಯಲ್ಲಿ ಅಧಿಕಾರಿ ವರ್ಗ ಭಾಗಿಯಾಗಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಮೆಕ್ಕೆಜೋಳ ಅಧಿಕವಾಗಿ ಬಿತ್ತನೆ ಮಾಡಲಾಗಿದೆ. ಅದಕ್ಕಾಗಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಅಗತ್ಯವಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಸಭೆಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಬಸವರಾಜ ಬೊಮ್ಮಾಯಿ, ಜಿಲ್ಲೆ ಸೇರಿದಂತೆ ರಾಜ್ಯದ ಒಟ್ಟು ರಸಗೊಬ್ಬರದ ಬೇಡಿಕೆ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಿ ಮಾಹಿತಿ ಒದಗಿಸಿದಲ್ಲಿ ರಸಗೊಬ್ಬರ ಪೂರೈಕೆಗೆ ಪ್ರಯತ್ನಿಸಲಾಗುವುದು ಎಂದರು.
ಸಭೆಯಲ್ಲಿ ವಸತಿ ಯೋಜನೆ, ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಉನ್ನತ ಶಿಕ್ಷಣ ವಿಷಯಗಳ ಕುರಿತಂತೆ ಶಾಸಕರುಗಳಾದ ಡಾ. ಚಂದ್ರು ಲಮಾಣಿ, ಸಿ.ಸಿ. ಪಾಟೀಲ, ಎಸ್.ವಿ. ಸಂಕನೂರ ಚರ್ಚೆ ನಡೆಸಿದರು. ನಗರಾಭಿವೃದ್ಧಿ ಇಲಾಖೆಯಿಂದ ಎಎಚ್‌ಪಿ ಯೋಜನೆಯಡಿ ಗದಗ ಬೆಟಗೇರಿ ಅವಳಿ ನಗರದಲ್ಲಿ 3630 ಮನೆಗಳ ನಿರ್ಮಾಣದಲ್ಲಿ ಒಂದನೇ ಹಂತದಲ್ಲಿ 1008 ಮನೆಗಳ ಪೈಕಿ 248 ಮನೆಗಳು ಪೂರ್ಣಗೊಂಡಿದ್ದು ಹಂಚಿಕೆ ಮಾಡಲಾಗಿದೆ. ಉಳಿದ 758 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿವೆ.
15ನೇ ಹಣಕಾಸು ಯೋಜನೆಯಡಿ 2020-21ರಿಂದ 2024-25ರವರೆಗೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಲ್ಲಿ 632 ಕಾಮಗಾರಿ ಮಂಜೂರಾಗಿದ್ದು, 542 ಪೂರ್ಣಗೊಳಿಸುವ ಮೂಲಕ ಶೇ.85.76 ಭೌತಿಕ ಗುರಿ ಸಾಧನೆಯಾಗಿದೆ. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾಮಾಜಿಕ ಭದ್ರತಾ ಯೋಜನೆಯಡಿ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಸಂಧ್ಯಾ ಸುರಕ್ಷಾ ಯೋಜನೆ, ಮೃತರಹಿತ ಪತ್ನಿಗೆ ವಿಧವಾ ವೇತನ, ಮನಸ್ವಿನಿ, ಮೈತ್ರಿ ಯೋಜನೆಗಳಡಿ ಒಟ್ಟು 1,62,230 ಫಲಾನುಭವಿಗಳಿದ್ದಾರೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ಒದಗಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರು ಪೂರೈಕೆಗಾಗಿ ಈಗಾಗಲೇ ತುಂಗಭದ್ರಾ ಹಾಗೂ ಮಲಪ್ರಭಾ ನದಿಯಿಂದ ನೀರು ಪೂರೈಕೆಗೆ ಯೋಜನೆ ಸಿದ್ಧಪಡಿಸಿ ಅನುಷ್ಠಾನಗೊಳಿಸುವ ಮೂಲಕ ನಿರಂತರ ನೀರು ಒದಗಿಸಲು ಚಾಲನೆ ನೀಡಲಾಗಿದ್ದರೂ ಈವರೆಗೂ ನಗರದ ಸಾರ್ವಜನಿಕರಿಗೆ ನಿಯಮಿತವಾಗಿ ನೀರು ಪೂರೈಕೆ ಸಾಧ್ಯವಾಗದಿರುವುದು ವಿಷಾದನೀಯ. ಅಧಿಕಾರಿ ವರ್ಗ ಮಾತ್ರ ಈ ಹಿಂದೆ ನೀಡಿರುವ ಸೂಚನೆಯನ್ನು ಪಾಲನೆ ಮಾಡುವಲ್ಲಿ ವಿಳಂಬ ಧೋರಣೆ ತಾಳಿದಂತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.



