ಬೆಂಗಳೂರು: ಎಸ್ಐಆರ್ (SIR) ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸರ್ಕಾರಿ ಶಾಲೆಯ ಶಿಕ್ಷಕಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತರನ್ನು ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಶಮಂತ ಕುಮಾರಿ (44) ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಅವರನ್ನು ಬಿಎಲ್ಒ (BLO) ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.
ಕುಟುಂಬಸ್ಥರ ಮಾಹಿತಿ ಪ್ರಕಾರ, ಎಸ್ಐಆರ್ ಕೆಲಸದ ಒತ್ತಡದ ನಡುವೆ ಶಿಕ್ಷಕಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಶುಗರ್, ಬಿಪಿ ಹೆಚ್ಚಾಗಿ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಗುರುವಾರ (ಜು.23) ರಾತ್ರಿ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ.
ಎಸ್ಐಆರ್ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮೇಲಾಧಿಕಾರಿಗಳು ಒತ್ತಡ ಹೇರುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕರ್ತವ್ಯದಿಂದ ಬಿಡುಗಡೆ ಮಾಡುವಂತೆ ಶಿಕ್ಷಕಿ ಮನವಿ ಮಾಡಿದ್ದರು, ಆದರೆ ಒತ್ತಡ ಮುಂದುವರಿದ ಪರಿಣಾಮ ಆರೋಗ್ಯ ಹದಗೆಟ್ಟು ಹೃದಯಾಘಾತವಾಗಿದೆ ಎಂದು ಕುಟುಂಬಸ್ಥರು ದೂರಿದ್ದಾರೆ.
ಘಟನೆ ಬಳಿಕ ಶಿಕ್ಷಕರ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಕರ್ತವ್ಯದ ಒತ್ತಡದ ಬಗ್ಗೆ ಚರ್ಚೆ ಆರಂಭವಾಗಿದೆ. ಘಟನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಬರಬೇಕಿದೆ.



