ಬೆಂಗಳೂರು: ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು 21 ವರ್ಷದ ಸಿರಿಶಾ ಎಂದು ಗುರುತಿಸಲಾಗಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಪಕ್ಕದಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ಪರಿಣಾಮ ಸಿರಿಶಾ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದು, ತಲೆ ಮೇಲೆ ಬಸ್ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ನಂತರ ಸ್ಥಳಕ್ಕೆ ಪೊಲೀಸರು ಧಾವಿಸಿ ಮೃತದೇಹವನ್ನು ಆರ್‌ಆರ್ ನಗರ ಮೆಡಿಕಲ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಸ್ ಚಾಲಕ ಚಂದ್ರು ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಬಳಿಕ ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶ ಉಂಟಾಗಿದೆ.



